ಕೊಪ್ಪಳ: ವಿಶ್ವಗುರು ಬಸವಣ್ಣ ಅವರ ಕುರಿತು ಅವಹೇಳನಕಾರಿಯಾಗಿ ಬರೆದಿರುವ ವ್ಯಕ್ತಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ನಾಡಿನ ಮಹನೀಯರ ಬಗ್ಗೆ ಅಲ್ಲೊಬ್ಬರು, ಇಲ್ಲೊಬ್ಬರು ಅವಿವೇಕದಿಂದ ಮಾತನಾಡುವ ಪ್ರವೃತ್ತಿ ತೋರುತ್ತಿದ್ದಾರೆ. ಇಂತಹ ಹೇಳಿಕೆಗಳು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೆ, ಮಹನೀಯರ ಆದರ್ಶಗಳಿಗೆ ಅಪಮಾನ ಮಾಡಿದಂತಾಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾರೂ ಇತಿಹಾಸ ಪುರುಷರು ಹಾಗೂ ಸಮಾಜ ಸುಧಾರಕರ ಗೌರವಕ್ಕೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹವರ ವಿರುದ್ಧ ಸರ್ಕಾರ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಬಸವಣ್ಣ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಇಡೀ ಸಮಾಜಕ್ಕೆ ಸಮಾನತೆ, ಕಾಯಕ ಮತ್ತು ಮಾನವೀಯತೆಯ ಸಂದೇಶ ಸಾರಿದ ಮಹಾನ್ ಚೇತನ. ಅವರ ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಹೀಗಾಗಿಯೇ ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದರು.ಬೆಳೆ ಹಾನಿ-ಸಮೀಕ್ಷೆ ನಡೆಸಿ ಪರಿಹಾರ: ತುಂಗಭದ್ರಾ ಜಲಾಶಯದಿಂದ ನ. 28ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ನ. 30ರ ನಂತರ ಎಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಲಿದೆ ಎಂದು ಸಮೀಕ್ಷೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಲಾಗುವುದು. ಸಮೀಕ್ಷೆಯ ವರದಿ ಆಧರಿಸಿ ಎನ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಮಾನದಂಡಗಳ ಅನ್ವಯ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರ ಒದಗಿಸಲಾಗುವುದು. ರೈತರಿಗೆ ಯಾವುದೇ ಅನ್ಯಾಯವಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.