ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರಸ್ತುತ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ದಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಹೆಜ್ಜೆ ಇಟ್ಟಿದ್ದು, ಈ ಬಗ್ಗೆ ಅವಲೋಕನಗಳು ನಡೆಯಬೇಕಿದೆ ಎಂದು ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಪತ್ರಿಕಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಸುದ್ದಿ ಸಂಪಾದನೆ, ವಿಶ್ಲೇಷಣೆ, ವಿವರಣೆ, ವಿಮರ್ಶೆ ಹೀಗೆ ವಿವಿಧ ರೀತಿಯಲ್ಲಿ ಅವಲೋಕನ ಮಾಡುವಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯುಕ್ತವಾಗಿದ್ದರೂ ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.ಆಧುನಿಕ ಜಗತ್ತು ಬೆಳೆದಂತೆ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ಬರುತ್ತಿದ್ದು, ಈ ಕುರಿತು ಸಾಧಕ ಬಾದಕಗಳ ಬಗ್ಗೆ ಅವಲೋಕಿಸಿ ಮಾಧ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಆಡಳಿತ ಮತ್ತು ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತಷ್ಟು ವಸ್ತುನಿಷ್ಠ ಹಾಗೂ ಉತ್ತರಾದಾಯಿತ್ವವನ್ನು ಮಾಧ್ಯಮಗಳು ಹೊಂದಿರಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ರಾಷ್ಟ್ರದಲ್ಲಿ 1780 ರಲ್ಲಿ ಬೆಂಗಾಲ್ ಗೆಜೆಟ್ ಆರಂಭವಾಗುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಹಲವು ಬದಲಾವಣೆಗಳನ್ನು ಕಾಣಲಾಯಿತು. 1602 ರಲ್ಲಿ ಜರ್ಮನಿಯಲ್ಲಿ ಪತ್ರಿಕೆ ಆರಂಭಿಸಿದ್ದು ವಿಶ್ವದಲ್ಲಿ ಪ್ರಥಮವಾಗಿದೆ ಎಂದರು.ಮಾಧ್ಯಮಗಳು ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆ ನಿಟ್ಟಿನಲ್ಲಿ ವಿವಿಧ ಸಂದರ್ಭಗಳಲ್ಲಿ ಮಾಧ್ಯಮಗಳು ಜಿಲ್ಲಾಡಳಿತದ ಜೊತೆ ತುಂಬಾ ಸಹಕಾರ ನೀಡಿವೆ ಎಂದು ಸ್ಮರಿಸಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆ ನಡುವೆ ಒಂದಕ್ಕೊಂದು ಸಂಪರ್ಕ ಕೊಂಡಿಯಾಗಿದೆ. ಅಪರಾಧ ಸುದ್ದಿಗಳು ಸೇರಿದಂತೆ ಹಲವು ಮಾಹಿತಿಗಳನ್ನು ಮಾಧ್ಯಮಗಳ ಮೂಲಕ ಪೊಲೀಸರು ತಿಳಿದುಕೊಳ್ಳುತ್ತಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ವದಂತಿಗಳಿಗೆ ಹೆಚ್ಚು ಮಹತ್ವ ನೀಡುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಹಾಗೂ ಪ್ರತಿಯೊಬ್ಬರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.ಕೊಡಗು ಪತ್ರಿಕಾ ಭವನ ಸ್ಥಾಪಕ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ದೇಶದ ಐಕ್ಯತೆ ಮತ್ತು ಸ್ವಾತಂತ್ರ್ಯಕ್ಕಾಗಿ ಪತ್ರಿಕೋದ್ಯಮವನ್ನು ಹಿಂದಿನವರು ಆರಂಭಿಸಿದರು. ಆ ನಿಟ್ಟಿನಲ್ಲಿ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋರನ ಸರಸ್ವತಿ ಮಾತನಾಡಿ, ಮಾಧ್ಯಮಗಳು ಪ್ರಜಾಪ್ರಭುತ್ವದ ಕಾವಲುಗಾರರಾಗಿ ಕರ್ತವ್ಯ ನಿರ್ವಹಿಸುತ್ತವೆ. ಪ್ರಜೆಗಳು ಮತ್ತು ಪ್ರಭುಗಳ ನಡುವೆ ಸಮನ್ವಯತೆ ಕಾಯುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದರು.ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗಗಳು ನಾಲ್ಕು ಆಧಾರ ಸ್ತಂಭವಾಗಿದ್ದು, ಭಾರತದ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಒಂದಕ್ಕೊಂದು ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಎಫ್‌ಎಂಸಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ಪಾಲ್ಗೊಂಡಿದ್ದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು. ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್, ಚೊಕ್ಕಾಡಿ ಪ್ರೇಮ ರಾಘವಯ್ಯ, ವೀಣಾಕ್ಷಿ ಅವರು ನಾಡಗೀತೆ ಹಾಡಿದರು. ವಿನೋದ್ ಮೂಡಗದ್ದೆ ನಿರೂಪಿಸಿದರು. ಪತ್ರಕರ್ತ ಎಚ್.ಟಿ.ಅನಿಲ್ ವಂದಿಸಿದರು.