ಭವ್ಯ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಕರೆತರಲು ಸಿದ್ಧತೆ
ಕನ್ನಡಪ್ರಭ ವಾರ್ತೆ ಹಾವೇರಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಫೆ.1ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಅಂದು ಹಾವೇರಿ ಜಿಲ್ಲಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸುವುದಾಗಿ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದರು.
ಇಲ್ಲಿಯ ಪಕ್ಷದ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಗರಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಕೋರಲು ಸಿದ್ಧತೆ ಮಾಡಲಾಗಿದೆ. ತೋಟದಯಲ್ಲಾಪುರದಿಂದ ಬೈಕ್ ರ್‍ಯಾಲಿ ಮೂಲಕ ಅವರನ್ನು ಸ್ವಾಗತಿಸಲಾಗುವುದು. ಪಿ.ಬಿ. ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ, ಎಂ.ಜಿ. ರೋಡ್ ಮೂಲಕ ಹುಕ್ಕೇರಿಮಠದ ಶಿವಬಸವ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ತಲುಪಲಿದೆ. ಬೆಳಗ್ಗೆ 11 ಗಂಟೆಗೆ ಶಿವಬಸವ ಕಲ್ಯಾಣಮಂಟಪದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಿದರು.ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಮಾಜಿ ಸಚಿವರು, ಮಾಜಿ ಶಾಸಕರು, ಸ್ಥಳಿಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ರಾಜ್ಯದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿ ಆಗಲಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಮತ್ತು ಪದಾಧಿಕಾರಿಗಳ ನೇಮಕದ ಸವಾಲಿನ ಕುರಿತು ಕೇಳಿದ ಪ್ರಶ್ನೆಗೆ, ನಮಗೆ ಯಾವ ಸವಾಲು ಇಲ್ಲ, ಇದು ಸುಲಭ. ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಶೀಘ್ರದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದ ಅಭ್ಯರ್ಥಿಯನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವುದಷ್ಟು ನಮ್ಮ ಕೆಲಸ. ಹಿಂದಿಗಿಂತಲೂ ಈ ಸಲ ಪಕ್ಷದ ಅಭ್ಯರ್ಥಿ ಅತ್ಯಧಿಕ ಮತಗಳಿಂದ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಜಿಲ್ಲಾ ಮಾಧ್ಯಮ ಸಂಚಾಕ ಕಿರಣಕುಮಾರ ಕೋಣನವರ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ ಇದ್ದರು.