ಕನ್ನಡಪ್ರಭ ವಾರ್ತೆ ವಿಜಯಪುರ
ಸಮುದಾಯಕ್ಕೆ ಆರೋಗ್ಯ ಸೇವೆ ಒದಗಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ .ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾಗಿದ್ದ ಪ್ರಸೂತಿ ಮತ್ತು ಶಿಶುಗಳ ಆರೈಕೆ ಕುರಿತ ಆಶಾ ದೀಪ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಸಮಾಜ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ಸರಕಾರದಿಂದ ಲಭ್ಯವಿರುವ ಸೇವೆಗಳ ಕುರಿತು ಸಮುದಾಯದ ಜನರಿಗೆ ಮಾಹಿತಿ ಒದಗಿಸುತ್ತಾರೆ. ಅಲ್ಲದೇ, ಆಯೋಜನೆಗಳನ್ನು ತಲುಪಿಸುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಅವರದೇ ಆದ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳೆ ಮಾತನಾಡಿದರು. ಹೆರಿಗೆ ಸಂದರ್ಭದಲ್ಲಿ ತಾಯಿಯ ಮರಣ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರು ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ.ಎಂ.ಜಯರಾಜ ಅವರು ಪ್ರಸವಪೂರ್ವ ಗರ್ಭಿಣಿಯರ ಆರೈಕೆ ಮತ್ತು ಪೋಷಣೆ ಕುರಿತು ಮಾಹಿತಿ ನೀಡಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಎಸ್.ಮುದೋಳ ಮಾತನಾಡಿ, ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಲಭ್ಯವಿರುವ ಆರೋಗ್ಯ ಸೇವೆಗಳ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಡಾ. ಕೇಸರಸಿಂಗ್ ಗುಂಡಬಾವಡಿ, ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಎಂ. ಹೊನ್ನುಟಗಿ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥೆ ಡಾ. ಶೈಲಜಾ ಬಿದರಿ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಎಂ.ಎಂ.ಪಾಟೀಲ ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಪಾಲ್ಗೊಂಡ ಸುಮಾರು 300 ಆಶಾ ಕಾರ್ಯಕರ್ತೆಯರು ಬಿ.ಎಲ್.ಡಿ.ಇ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಹೊರ ರೋಗಿಗಳ ವಿಭಾಗ, ಹೆರಿಗೆ ವಾರ್ಡ್, ತಾಯಿಯ ಎದೆಹಾಲು ಬ್ಯಾಂಕ್, ನವಜಾತ ಶಿಶುಗಳ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿದರು.