₹10 ಸಾವಿರ ಗೌರವಧನ ಪಾವತಿಗೆ ಆಶಾಗಳ ಆಗ್ರಹ

KannadaprabhaNewsNetwork |  
Published : Aug 13, 2025, 12:30 AM IST
12ಡಿಡಬ್ಲೂಡಿ8ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ರು. 10 ಸಾವಿರ ಗೌರವಧನ ನೀಡುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಧಾರವಾಡದಲ್ಲಿ ಧರಣಿ ನಡೆಸಿದರು.  | Kannada Prabha

ಸಾರಾಂಶ

ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಜನರನ್ನೂ ಆರೋಗ್ಯವಂತರನ್ನಾಗಿಡಲು ಶ್ರಮಿಸುತ್ತಿದ್ದಾರೆ. ಅವರ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಗೌರವ ಧನವನ್ನು ಹೆಚ್ಚಿಸಬೇಕು.

ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ₹10 ಸಾವಿರ ಗೌರವಧನ ನೀಡುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮಂಗಳವಾರದಿಂದ ಅಹೋರಾತ್ರಿ ಧರಣಿ ಶುರು ಮಾಡಿದರು.

ಇಲ್ಲಿಯ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಆಶಾಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಹೋರಾತ್ರಿ ಧರಣಿಗೆ ಚಾಲನೆ ನೀಡಿದರು.

ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಜನರನ್ನೂ ಆರೋಗ್ಯವಂತರನ್ನಾಗಿಡಲು ಶ್ರಮಿಸುತ್ತಿದ್ದಾರೆ. ಅವರ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಗೌರವ ಧನವನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಪಿಎಫ್, ಇಎಸ್‍ಐ, ಗ್ರಾಚುಟಿ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜನವರಿ ತಿಂಗಳಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಪ್ರತಿ ತಿಂಗಳೂ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ₹10 ಸಾವಿರ ಗೌರವ ಧನ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇಲ್ಲಿಯ ವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಬಜೆಟ್‍ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಲಾಗಿರುವ ₹1000 ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು, ನಿವೃತ್ತರಾದವರಿಗೆ ಇಡಿಗಂಟು ನೀಡಬೇಕು, ₹2 ಸಾವಿರ ಗೌರವ ಧನ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ, ಭಾರತಿ ಶೆಟ್ಟರ್, ಸುಜಾತ ಹಿರೇಮಠ, ಶೈಲಾ ಮಧುಗಲ್, ಮಂಜುಳ ಗಾಡುಗೋಳಿ, ಸಪ್ನಾ ಸುಳ್ಳದ್, ರಾಜೇಶ್ವರಿ ಕೋರಿ, ನಂದಾ ದೊಡ್ಡಮನಿ, ಗೀತಾ ಸೂರ್ಯವಂಶಿ, ಜ್ಯೋತಿ ಶಾಂತಪ್ನವರ, ಸಂಗೀತ ಗೋರೋವನಕೊಳ ಇದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!