ಹಾವೇರಿಯಲ್ಲಿ ಆಶಾಗಳ ಹೋರಾಟ ತಾತ್ಕಾಲಿಕ ಅಂತ್ಯ

KannadaprabhaNewsNetwork |  
Published : Aug 15, 2025, 01:00 AM IST
ಹಾವೇರಿಯ ಎಂ.ಎಂ. ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ಆಶಾ ಕಾರ್ಯಕರ್ತೆಯರ ಎಲ್ಲ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು, ಇಲ್ಲವಾದರೆ ಎರಡನೇ ಹಂತದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಾ ಆಕ್ರೋಶ ವ್ಯಕ್ತಪಡಿಸಿ ಮೊದಲನೇ ಹಂತದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಹಾವೇರಿ: ಕನಿಷ್ಠ ವೇತನ, ಪ್ರೋತ್ಸಾಹಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಮೂರು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ತಾತ್ಕಾಲಿಕವಾಗಿ ಅಂತ್ಯಗೊಂಡಿತು. ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಗುರುವಾರ ಮಧ್ಯಾಹ್ನದ ವೇಳೆ ಮಾನವ ಸರಪಳಿ ನಿರ್ಮಿಸುವ ಮೂಲಕ ಆಶಾ ಕಾರ್ಯಕರ್ತೆಯರು ಒಗ್ಗಟ್ಟು ಪ್ರದರ್ಶಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಆಶಾ ಕಾರ್ಯಕರ್ತೆಯರ ಎಲ್ಲ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು, ಇಲ್ಲವಾದರೆ ಎರಡನೇ ಹಂತದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಾ ಆಕ್ರೋಶ ವ್ಯಕ್ತಪಡಿಸಿ ಮೊದಲನೇ ಹಂತದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.ಈ ವೇಳೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ಆಶಾ ಸಾಫ್ಟ್ ಎಂಬ ಅವೈಜ್ಞಾನಿಕ ತಂತ್ರಜ್ಞಾನ ತಂದು ಆಶಾ ಕಾರ್ಯಕರ್ತೆಯರಿಗೆ ಇನ್ನಿಲ್ಲದ ಸಂಕಷ್ಟ ತಂದೊಡ್ಡಿದೆ. ಇದು ಅವೈಜ್ಞಾನಿಕವಾಗಿದೆ. ವಿವಿಧ ಕೆಲಸಗಳನ್ನು ಆಶಾಗಳಿಂದಲೇ ಮಾಡಿಸಿಕೊಂಡು ಸಂಬಳವನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.ಸಂಘದ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ, ಉಪಾಧ್ಯಕ್ಷೆ ಮಂಜುಳಾ ಮಾಸೂರ ಮಾತನಾಡಿ, ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿ ಹೆಚ್ಚಿಸುವುದನ್ನು ಕೈಬಿಡಬೇಕು, ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ರತ್ನಾ ಗಿರಣಿ, ಮಧುಲತಾ ಗೌಡರ, ಪುಷ್ಪಾ ಮಡ್ಲೂರಮಠ, ರೇಖಾ ಕರಿಗಾರ, ಮಂಗಳಾ ಚಪ್ಪರದಹಳ್ಳಿಮಠ, ಸವಿತಾ ಪಾಟೀಲ, ವಿನೋದಾ ಹೊಂಡದ, ರೇಹನಾಬಾನು, ರತ್ನಾ ಮಕರವಳ್ಳಿ, ಹೂವಕ್ಕ ಮಕರವಳ್ಳಿ, ನೀಲವ್ವ ಲಮಾಣಿ, ಪ್ರೇಮಾ, ರೂಪಾ, ಗಂಗಮ್ಮ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ