
ಕಾರವಾರ: ಭಟ್ಕಳ ತಾಲೂಕಿನ ಶಿರಾಲಿ ಆರೋಗ್ಯ ಕೇಂದ್ರದಲ್ಲಿ ಹೆಣ್ಣುಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಖಂಡಿಸಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಭಾನುವಾರದೊಳಗೆ ಬಂಧಿಸದಿದ್ದರೆ ಸೋಮವಾರದಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ಎಚ್ಚರಿಕೆ ನೀಡಿದ್ದಾರೆ.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾಲಿ ಆರೋಗ್ಯ ಕೇಂದ್ರದಲ್ಲಿ ಮಗು ಮೃತಪಟ್ಟ ಬಳಿಕ ಕುಟುಂಬಸ್ಥರು ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಈಗಾಗಲೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಭಾನುವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಸೋಮವಾರದಿಂದ ಆರೋಗ್ಯ ಸೇವೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೃತಿ ಮಾತನಾಡಿ, ಹೆಣ್ಣುಮಗು ಜನಿಸಿದ್ದಕ್ಕೆ ಕುಟುಂಬಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದರು. ಮಗುವಿನ ಆರೈಕೆಯಲ್ಲಿ ತಾಯಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಮನಿಸಿದ ನರ್ಸ್ ಹಾಗೂ ಕರ್ತವ್ಯದಲ್ಲಿದ್ದ ವೈದ್ಯರು ಈ ಕುರಿತು ಸೂಚನೆ ನೀಡಿದ್ದರು. ಬಳಿಕ ಮಗುವಿನ ರಕ್ತದೊತ್ತಡ ಕಡಿಮೆಯಾದಾಗ ತಕ್ಷಣ ಪರಿಶೀಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ವಿವರಿಸಿದರು.ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯೆ ಡಾ. ಸವಿತಾ ಕಾಮತ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ಮಾತನಾಡಿದರು.