ಆತ್ಮನಿರ್ಭರ್‌, ಮೇಕ್‌ ಇಂಡಿಯಾ ಕೈಗಾರಿಕೆಗೆ ಸಂಜೀವಿನಿ: ಎಚ್‌ಡಿಕೆ

KannadaprabhaNewsNetwork |  
Published : Aug 28, 2024, 01:34 AM IST
HDK at BHEL 1 | Kannada Prabha

ಸಾರಾಂಶ

ಬಿಎಚ್‌ಇಲ್‌ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ್ದರು. ಈ ವೇಳೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರಧಾನಿ ನರೇಂದ್ರಮೋದಿ ಅವರ ಆತ್ಮನಿರ್ಭರ್ ಭಾರತ ಹಾಗೂ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರಕ್ಕೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಮಂಗಳವಾರ ನಗರದ ಮೈಸೂರು ರಸ್ತೆಯಲ್ಲಿನ ಬಿಎಚ್‌ಇಎಲ್‌ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಕಾರ್ಮಿಕರ ಜತೆ ಸಂವಾದ ನಡೆಸಿದರು. ಈ ವೇಳೆ ಅವರು, ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು ದೊಡ್ಡ ಹೆಜ್ಜೆಗಳನ್ನಿಡುತ್ತಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದ್ದು, ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಧಾನಿಗಳು ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಿದ್ದು, ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು ಹೆಚ್ಚಳ ಮಾಡುವುದು ಅವರ ಉದ್ದೇಶವಾಗಿದೆ. ಅದಕ್ಕಾಗಿ ಅವರ ಕನಸಿನ ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂದರು.

ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಬಿಎಚ್‌ಇಎಲ್‌ ಉತ್ತಮವಾಗಿ ನಡೆಯುತ್ತಿದೆ. ಮೈಸೂರು ಅರಸರ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಿನ್ನೆಲೆಯಲ್ಲಿ ಈ ಸಂಸ್ಥೆ ಸ್ಥಾಪನೆಯಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಸಾರ್ವಜನಿಕ ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಇಂಥ ಸವಾಲಿನ ನಡುವೆಯೂ ಬಿಎಚ್‌ಇಎಲ್‌ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ವಿದ್ಯುತ್ ಕ್ಷೇತ್ರದಲ್ಲಿ ಬಿಎಚ್‌ಇಎಲ್‌ ಕೊಡುಗೆ ಅಸಾಧಾರಣವಾಗಿದ್ದು, ಥರ್ಮಲ್ ವಿದ್ಯುತ್ ಕ್ಷೇತ್ರದಲ್ಲಿ ಶೇ.40ಕ್ಕೂ ಹೆಚ್ಚು ಮಾರುಕಟ್ಟೆ ಪಾಲನ್ನು ಕಂಪನಿ ಹೊಂದಿದೆ. ಭಾರತೀಯ ಸೇನೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಈ ಕಂಪನಿ ಕೊಡುಗೆ ಅನನ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ಮೇಕ್‌ ಇನ್‌ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆಯ ಅಡಿಯಲ್ಲಿ ಬಿಎಚ್‌ಇಎಲ್‌ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳ ನಡುವೆ ಕಂಪನಿಯು ವೇಗವಾಗಿ ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಹೊಸ ಆವಿಷ್ಕಾರ, ತಂತ್ರಜ್ಞಾನ ಅಳವಡಿಕೆಯಲ್ಲಿ ಮೈಮರೆಯುವುದು ಬೇಡ. ಒಳ್ಳೆಯ ಆಡಳಿತ, ಉತ್ತಮ ಕಾರ್ಮಿಕ ಶಕ್ತಿ, ತಾಂತ್ರಿಕ ಕುಶಲತೆಯಿಂದ ಉತ್ತಮ ಸ್ಥಿತಿಯಲ್ಲಿದೆ. ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಇದು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ