ಮುಂಡಗೋಡ: ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸುವುದರ ಜತೆಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಕಾತೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದಲ್ಲಿ ೧೨ ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ೬೬ ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಗಂಭೀರ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದೆ. ಸಂತ್ರಸ್ತ ಬಾಲಕಿ ಪ್ರಸ್ತುತ ಸುಮಾರು ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ತೀವ್ರ ನೋವು ಮತ್ತು ಕಳವಳಕಾರಿ ಸಂಗತಿಯಾಗಿದೆ.
ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಹಾಗೂ ಅನ್ವಯವಾಗುವ ಇತರ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಬಾಲಕಿ ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿಯೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಬಾಲಕಿಗೆ ಸೂಕ್ತ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ, ಅಗತ್ಯ ಮಾನಸಿಕ ಸಮಾಲೋಚನೆ ಹಾಗೂ ಆಕೆ ಬಯಸುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಬೇಕು. ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಒದಗಿಸುವುದರ ಜತೆಗೆ ಸರ್ಕಾರದಿಂದ ದೊರೆಯಬೇಕಾದ ಕಾನೂನು ನೆರವು ಹಾಗೂ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.ಸಂತ್ರಸ್ತ ಬಾಲಕಿಯ ಹೆಸರು, ಭಾವಚಿತ್ರ ಹಾಗೂ ವೈಯಕ್ತಿಕ ವಿವರಗಳನ್ನು ಸಂಪೂರ್ಣ ಗೌಪ್ಯವಾಗಿಡಬೇಕು. ಆಕೆಯ ಮುಂದಿನ ಶಿಕ್ಷಣಕ್ಕೆ ಯಾವುದೇ ಅಡಚಣೆಯಾಗದಂತೆ ಆಕೆ ಬಯಸುವ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಬೇಕು. ಭವಿಷ್ಯದಲ್ಲಿ ಉದ್ಯೋಗಾವಕಾಶ ಹಾಗೂ ಆರ್ಥಿಕ ಭದ್ರತೆ ಕಲ್ಪಿಸುವುದರ ಜತೆಗೆ ಕನಿಷ್ಠ ೫೦ ಲಕ್ಷ ರು. ಪರಿಹಾರ ನೀಡಬೇಕು. ಪ್ರಕರಣದಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪ್ರಕರಣಕ್ಕೆ ಸಹಕರಿಸಿದ ಅಥವಾ ಭಾಗಿಯಾಗಿರುವ ಇತರರ ಪಾತ್ರದ ಬಗ್ಗೆಯೂ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೇವರಾಜ ಪಾಟೀಲ, ಪ್ರಭು ಪಾಟೀಲ, ಫಕ್ಕೀರಪ್ಪ ಆಲಳ್ಳಿ, ಅನಿಲ ರಾವಳ, ರಮೇಶ ಶೇಟ್, ಸಂಜು ಕೀರ್ತೆಪ್ಪನವರ, ಪ್ರಭು ತಿಳವಳ್ಳಿ, ಮಂಜಪ್ಪ ಕುನ್ನೂರ, ಸಂತೋಷ ಕೀರ್ತೆಪ್ಪನವರ, ಚಂದ್ರಕಾಂತ ಪಾಟೀಲ, ಸೇರಿದಂತೆ ಹಲವು ಮಹಿಳೆಯರು ನೂರಾರು ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.