ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದೂರಿನ ಮೇರೆಗೆ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿರುವ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿ ಚೆನ್ನಮ್ಮ ನಗರದಲ್ಲಿ ಮಂಗಳವಾರ ನಡೆದಿದೆ.ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಒರ್ವನನ್ನು ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ ನಾಲ್ವರನ್ನು ವಶಕ್ಕೆ ಪಡೆದು ವೇಶ್ಯಾವಾಟಿಕೆ ನಡೆಸಲು ಮಹಾರಾಷ್ಟ್ರ ರಾಜ್ಯದಿಂದ ಕರೆತಂದ ಒರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಯು ವಿವಿಧ ರಾಜ್ಯಗಳಿಂದ ಯುವತಿಯರನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.