ಡೊನೇಷನ್ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುತ್ತಿಗೆ ಯತ್ನ

KannadaprabhaNewsNetwork |  
Published : May 28, 2026, 02:00 AM IST
ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಿ ಕರವೇ ಕಾವಲುಪಡೆ ಕಾರ್ಯಕರ್ತರು ಬಳ್ಳಾರಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಡೊನೇಷನ್ ಹಾವಳಿ ಮಿತಿ ಮೀರುತ್ತಿದೆ.

ಬಳ್ಳಾರಿ: ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಡಿಡಿಪಿಐ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾವಲುಪಡೆ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿ, ಬಿಡುಗಡೆಗೊಳಿಸಿದರು.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಡೊನೇಷನ್ ಹಾವಳಿ ಮಿತಿ ಮೀರುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದಾಗಿಯೇ ಶಿಕ್ಷಣವನ್ನು ವ್ಯಾಪಾರದ ಸರಕನ್ನಾಗಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಬಹುತೇಕ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಇಲಾಖೆಯ ಮಾನದಂಡಗಳನ್ನು ಗಾಳಿಗೆ ತೂರಿದ್ದಾರೆ. ನಿಮಯಗಳು ಬರೀ ಕಾಗದ ಪತ್ರದಲ್ಲಿ ಮಾತ್ರ ಉಳಿದಿವೆ. ಆದರೆ, ಈವರೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಯಾವುದೇ ಕಾನೂನು ಕ್ರಮವಾಗಿಲ್ಲ ಎಂದು ಪ್ರತಿಭಟನಾಕಾರರು ಆಪಾದಿಸಿದರು.

ಪಠ್ಯಪುಸ್ತಕಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನಾನಾ ನೆಪದಲ್ಲಿ ಪೋಷಕರಿಂದ ಹಣ ಕಿತ್ತುಕೊಳ್ಳುವ ಶಿಕ್ಷಣ ಸಂಸ್ಥೆಗಳ ಮಾಲೀಕರು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗಿ ಪರಿಣಮಿಸಿದ್ದಾರೆ. ಇಷ್ಟಾಗಿಯೂ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ವಹಿಸದೇ ಮೌನ ವಹಿಸಿರುವುದು ನಾನಾ ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಯನ್ನು ನಿಯಂತ್ರಿಸಬೇಕು. ಡೊನೇಷನ್ ಹಾವಳಿ ತಡೆಗೆ ಜಿಲ್ಲಾ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ರಚನೆ ಮಾಡಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕರ್ನಾಟಕ ಸರ್ಕಾರದ ಪುಸ್ತಕ ಭಂಡಾರದಿಂದ ಮುದ್ರಣ ವಾಗುವ ಎಲ್ಲ ಪಠ್ಯಪುಸ್ತಕಗಳು ಜಿಲ್ಲಾಡಳಿತ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿ ಸಮ್ಮುಖದಲ್ಲಿ ಮಾರಾಟವಾಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಕರವೇ ಕಾವಲುಪಡೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಚ್.ಸುರೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಸ್.ಎನ್. ನರಸಿಂಹರಾಜು, ಯುವ ಘಟಕ ಜಿಲ್ಲಾಧ್ಯಕ್ಷ ವಿ.ಎಸ್. ಸಾಗರ್ ಅಪ್ಪು, ಮೋಹನ್ ಶಾನಭೋಗ್, ಅಶೋಕ್ ಬಡಿಗೇರ್, ಮುಬಾರಕ್, ವೀರೇಶಕುಮಾರ್, ದೊಡ್ಡನಗೌಡ, ರವಿಕುಮಾರ್ ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಂಘಟನೆಯ ಮುಖಂಡರು ಮನವಿ ಸಲ್ಲಿಸಿ, ಡೊನೇಷನ್ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸಿ: ಡಾ. ದುರಗೇಶ್ ಕೆ.ಆರ್.
ಗೋ ಹತ್ಯೆ ತಡೆಯುವಂತೆ ಆಗ್ರಹಿಸಿ ಪ್ರತಿಭಟನೆ