ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದನ್ನು ಖಂಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ನೈತಿಕ ಹೊಣೆಗಾರಿಕೆ ಇದ್ದರೆ ಕೂಡಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಹಗರಣದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡುವ ಮೂಲಕ ಸರ್ಕಾರ ಜನತೆಗೆ ಯಾವ ಸಂದೇಶ ನೀಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ನಂತರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಕಚೇರಿ ಆವರಣದತ್ತ ತೆರಳದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಮುಖಂಡರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಪಕ್ಷದ ಜಿಲ್ಲಾ ಪ್ರಮುಖರಾದ ಎಸ್. ಗುರುಲಿಂಗನಗೌಡ, ಕೆ.ಎ. ರಾಮಲಿಂಗಪ್ಪ, ಎಚ್. ಹನುಮಂತಪ್ಪ, ಅಡವಿಸ್ವಾಮಿ, ಶರಣಗೌಡ, ಡಾ. ಮಹಿಪಾಲ್, ದರಪ್ಪ ನಾಯಕ, ಜೀವೇಶ್ವರಿ ರಾಮಕೃಷ್ಣ, ಕೆ.ಮಲ್ಲೇಶ್ ಕುಮಾರ್, ಗುರ್ರಂ ವೆಂಕಟರಮಣಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.