ರಾಮನಗರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಾರಂಭವಾದ ಮೇಲೆ ಕಾಂಗ್ರೆಸ್ ನಾಯಕರ ಎದೆ ನಡುಗಲು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಕಳ್ಳ ಮತಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು
ರಾಮನಗರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಾರಂಭವಾದ ಮೇಲೆ ಕಾಂಗ್ರೆಸ್ ನಾಯಕರ ಎದೆ ನಡುಗಲು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಕಳ್ಳ ಮತಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕಳ್ಳ ಮತಗಳನ್ನು ಉಳಿಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 6 ಬಾರಿ ಎಸ್‌ಐಆರ್ ಪ್ರಕ್ರಿಯೆ ನಡೆದಿವೆ. ಆಗ ವಿಪಕ್ಷಗಳು ವಿರೋಧ ಮಾಡಲಿಲ್ಲ. ಆದರೀಗ ಕಾಂಗ್ರೆಸ್ ಕಳ್ಳ ಮತಗಳು ಕಳೆದುಕೊಳ್ಳುವ ಭೀತಿಯಿಂದಾಗಿ ವಿರೋಧ ಮಾಡುತ್ತಿದೆ. ಎಸ್‌ಐಆರ್ ಪ್ರಕ್ರಿಯೆ ನಡೆದ ರಾಜ್ಯಗಳಲ್ಲಿ 80 ಲಕ್ಷದಿಂದ 1 ಕೋಟಿಯಷ್ಟು ಮತಗಳು ಕಡಿತಗೊಂಡಿವೆ. ಆ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ಬರುತ್ತದೆ ಎಂಬ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಹಾಗಾಗಿ ದೊಡ್ಡ ತಂಡ ರಚಿಸಿಕೊಂಡು ಕಳ್ಳಮತ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರು ಬಿಎಲ್‌ಒ ಮತ್ತು ಬಿಎಲ್‌ಎಗಳಿಗೆ ಹಣದ ಪ್ಯಾಕೇಜ್ ನೀಡಿದ್ದಾರೆ. ಹೀಗಾಗಿಯೇ ಅವರೆಲ್ಲರು ಜನರನ್ನು ಗುಂಪುಗುಂಪಾಗಿ ಸೇರಿಸಿ ಗಣತಿ ನಮೂನೆ ವಿತರಿಸುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಗೃಹ ಸಚಿವ ಪ್ರಿಯಾಂಕ ಖರ್ಗೆಯವರು ಎಸ್ ಐಆರ್ ಬಗ್ಗೆ ನೂರಾರು ಪ್ರಶ್ನೆ ಕೇಳಿ ಅನುಮಾನ ವ್ಯಕ್ತಪಡಿಸುತ್ತಾರೆ. ಈಗ ರಾಮನಗರದಲ್ಲಿ ಅಕ್ರಮ ಮಾಡಿದವರ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ. ಈ ಜಿಲ್ಲಾಡಳಿತಕ್ಕೆ ಹೇಳುವವರು ಕೇಳುವವರು ಇಲ್ಲದಂತಾಗಿದೆ ಎಂದು ಮಂಜುನಾಥ್ ಕಿಡಿಕಾರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.