ಗದಗ: ಪ್ರತಿಯೊಬ್ಬರ ಜೀವನದಲ್ಲಿಯೂ ಆರೋಗ್ಯ ಸಂಪತ್ತು ಮುಖ್ಯ ಸಂಪತ್ತಾಗಿದೆ. ಅದರಲ್ಲಿಯೂ ನೌಕರರು ಸಾಕಷ್ಟು ಒತ್ತಡದಲ್ಲಿ ಕೆಲಸ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇರುತ್ತದೆ. ಅದಕ್ಕಾಗಿ ಎಲ್ಲರೂ ಆರೋಗ್ಯ ಸಂಪತ್ತು ಗಳಿಸುವ ಬಗ್ಗೆ ಗಮನ ಹರಿಸಬೇಕು ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭವನ್ನು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ನೌಕರರು ದಿನನಿತ್ಯ ಕಚೇರಿ ಕೆಲಸ ನಿರ್ವಹಣೆಯಲ್ಲಿನ ಒತ್ತಡವನ್ನು ಕಡಿಮೆಗೊಳಿಸಲು ಒಂದು ಗಂಟೆಯಾದರೂ ವ್ಯಾಯಾಮಕ್ಕಾಗಿಯೇ ಮೀಸಲಿಡಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡದಿಂದ ಹೊರಬಂದು ಚೈತನ್ಯದಿಂದ ಕೆಲಸ ನಿರ್ವಹಿಸಲು ಸಹಾಯಕವಾಗುತ್ತದೆ ಎಂದರು.ಪ್ರಕೃತಿ ವಿಕೋಪದಂತಹ ಕೆಲವು ಸಂದರ್ಭದಲ್ಲಿಯೂ ಸಹ ಸರ್ಕಾರಿ ನೌಕರರು ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದು ಶ್ಲಾಘನೀಯ ಸಂಗತಿಯಾಗಿದೆ. ಆರೋಗ್ಯವಂತ ನಾಗರಿಕರಿಂದ ಮಾತ್ರ ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಸಾಧ್ಯ. ಇತ್ತೀಚಿನ ದಿನಮಾನಗಳಲ್ಲಿ ಯುವ ಪೀಳಿಗೆ ಬಿಪಿ ಮಧುಮೇಹ, ಮಾನಸಿಕ ಒತ್ತಡ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿರುವುದು ವಿಷಾದನೀಯ ಸಂಗತಿ. ಸರ್ಕಾರಿ ನೌಕರರು ಪ್ರತಿನಿತ್ಯ ಯೋಗ, ಕ್ರೀಡೆಯನ್ನು ಹವ್ಯಾಸವಾಗಿಸಿಕೊಂಡು ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದರು.ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವ ಮೆರೆಯಬೇಕು ಎಂದರು.ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ರವಿ ಗುಂಜೀಕರ, ಪಿ.ಎಚ್. ಕಡಿವಾಳ, ಸತೀಶ ಕಟ್ಟಿಮನಿ, ಅಶೋಕ ಹಾದಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಯ ಕ್ರೀಡಾಪಟುಗಳು ಹಾಜರಿದ್ದರು.ಡಾ. ವೆಂಕಟೇಶ ಅಲ್ಕೋಡ ಅವರು ನಾಡಗೀತೆ ಪ್ರಸ್ತುತ ಪಡಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಬಿ. ಕೊಣ್ಣೂರ ವಂದಿಸಿದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು.