ಔರಾದ್‌ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಿ: ಶಾಸಕ ಪ್ರಭು ಚವ್ಹಾಣ್‌

KannadaprabhaNewsNetwork |  
Published : Dec 16, 2024, 12:48 AM IST

ಸಾರಾಂಶ

ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಕನ್ನಡಪ್ರಭ ವಾರ್ತೆ ಔರಾದ್‌

ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದ ಆಡಳಿತ ವ್ಯವಸ್ಥೆಗೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಕುರಿತು ಶಾಸಕ ಪ್ರಭು ಚವ್ಹಾಣ್‌ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.ಕೃಷಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಒಳಗೊಂಡು ವಿವಿಧ ಇಲಾಖೆಗಳ ಸಚಿವರಿಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿರುವ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿ ಅವರು, ತಾಲೂಕಿನ 7 ರೈತ ಸಂಪರ್ಕ ಕೇಂದ್ರಗಳಲ್ಲಿ ಮಂಜೂರಾಗಿರುವ 23 ಹುದ್ದೆಗಳ ಪೈಕಿ 19 ಹುದ್ದೆಗಳು ಖಾಲಿ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಖಾಲಿ ಹುದ್ದೆಗಳಿಗೆ ಲಭ್ಯವಿರುವ ಸಿಬ್ಬಂದಿಗಳನ್ನು ಅವರ ಕರ್ತವ್ಯದ ಜೊತೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಲಾಗಿದೆ. ಹಾಗೆಯೇ ವಿವಿಧ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಂಡು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ.ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಒಬ್ಬರೇ ಖಾಯಂ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಶಾಸಕರು ಪ್ರಶ್ನಿಸಿದ್ದು, ಉತ್ತರಿಸಿರುವ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ಅವರು, ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಕರಡು ನಿಯಮಗಳನ್ನು ರಚಿಸಲಾಗಿದೆ. ಈ ನಿಯಮಗಳನ್ನು ಸರ್ಕಾರದ ಅಧಿಸೂಚನೆಯಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಬೋಧಕ ವೃಂದದ ನೇಮಕಾತಿಗೆ ಕ್ರಮ ವಹಿಸಲಾಗುವುದು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.ಐಟಿಐ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್‌ ಅವರನ್ನು ಪ್ರಶ್ನಿಸಿದ್ದು, ಕಿರಿಯ ತರಬೇತಿ ಅಧಿಕಾರಿ ಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣವು ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇದ್ದು, ಅವುಗಳು ಇತ್ಯರ್ಥವಾಗುತ್ತಿ ದ್ದಂತೆ ಖಾಯಂ ಬೋಧಕರನ್ನು ನೇಮಿಸಲಾಗುವುದು ಉತ್ತರ ನೀಡಿದ್ದಾರೆ.ಔರಾದ್‌ (ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಖಾಯಂ ಸಿಬ್ಬಂದಿಗಳ ಕೊರತೆಯಿದ್ದು, ಆಡಳಿತಕ್ಕೆ ತೊಂದರೆಯಾಗುತ್ತಿದೆ. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಸಾರ್ವಜನಿಕರು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಸಿಬ್ಬಂದಿ ಕೊರತೆಯ ಬಗ್ಗೆ ಸಾಕಷ್ಟು ಸಲ ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಒಂದು ಇಲಾಖೆಯಲ್ಲಿ ಸಮಸ್ಯೆಯಿದ್ದರೆ ಹೇಗೋ ನಿಭಾಯಿಸಬಹುದು. ಆದರೆ ಎಲ್ಲ ಇಲಾಖೆಗಳಲ್ಲಿಯೂ ಸಮಸ್ಯೆಯಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸುವ ವರೆಗೆ ನಾನು ಸುಮ್ಮನಿರುವುದಿಲ್ಲ ಎಂದು ಪ್ರಭು ಚವ್ಹಾಣ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''