ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ
ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಸಂಗ್ರಹಿಸಿ ಸಮರ್ಪಕವಾಗಿ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ ಕಚೇರಿಯಲ್ಲಿ ಗುರುವಾರ ಭಟ್ಕಳ ಹಾಗೂ ಕುಮಟಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ ಎಂದು ಸೂಚಿಸಿದರು. ಅಲ್ಲದೆ ಜಾನುವಾರುಗಳಿಗೆ ಬೇಕಾಗುವ ಮೇವಿನ ದಾಸ್ತಾನಿನ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಾಲೂಕಾ ಆಸ್ಪತ್ರೆಗಳಲ್ಲಿ ಅನಸ್ತೇಶಿಯಾ ವೈದ್ಯರ ಕೊರತೆ ಇದೆ ಎಂದು ತಾಲೂಕು ಅಧಿಕಾರಿಗಳು ಹೇಳಿದಾಗ ಖಾಸಗಿ ವೈದ್ಯರನ್ನು ಕರೆಯಿಸಲು ಅನುಮತಿಯಿದೆ. ಅಂತಹ ವೈದ್ಯರನ್ನು ಸಂಪರ್ಕಿಸಿ ಎಂದು ತಾಕೀತು ಮಾಡಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ತಾಲೂಕಿನ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಬಗ್ಗೆ ಪರಿಶೀಲನೆ ನಡೆಸುವ ಕೆಲಸಕ್ಕೆ ಆಗಮಿಸಿದ್ದೇನೆ. ನಾನು ಕೇವಲ ಈ ಮಾಹಿತಿಯನ್ನು ಸಂಗ್ರಹಿಸಲು ಮಾತ್ರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಬಂದಿದ್ದೇನೆ. ಹೀಗಿದ್ದೂ ಇಲ್ಲಿನ ಪಿಂಚಣಿದಾರರಿಗೆ, ಸರ್ಕಾರಿ ಶಾಲೆಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಸಂಗ್ರಹಿಸಿದ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯ ಸಚಿವರೊಟ್ಟಿಗೆ ಮಾತನಾಡಿ ಶೀಘ್ರ ಪರಿಹಾರ ಒದಗಿಸಲು ಪ್ರಯತ್ನಿಸುತ್ತೇನೆ. ಅಧಿಕಾರಿಗಳು ಉತ್ತಮವಾಗಿ ಕೆಲಸಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತನ್ನಿ ಎಂದು ಲಕ್ಷ್ಮಣ ಸವದಿ ಹೇಳಿದರು.ಶಾಸಕರಾದ ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ, ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ್ ಶೆಶಿ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಸತೀಶ್ ನಾಯ್ಕ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಮಂಕಾಳ ವೈದ್ಯ ಗೈರು