ಡೆಂಘೀ ನಿಯಂತ್ರಣಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು

KannadaprabhaNewsNetwork | Published : Jul 28, 2024 2:00 AM

ಸಾರಾಂಶ

ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರ ಉಲ್ಬಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮುಂದಿನ ದಿನಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ರೋಗ ನಿಯಂತ್ರಣಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಡೆಂಘೀ ಜ್ವರ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡೆಂಘೀ ನಿಯಂತ್ರಣಕ್ಕೆ ಶ್ರಮಿಸಿ

ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರ ಉಲ್ಬಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಬೇಕು. ಇದಕ್ಕಾಗಿ ಹೆಚ್ಚಿನ ನಿಗಾವಹಿಸಲು ಅಧಿಕಾರಿಗಳ ತಂಡವನ್ನು ನಿಯೋಜಿಸಬೇಕು ಎಂದು ಹೇಳಿದರು.

ಸೊಳ್ಳೆ ನಿರೋಧಕಗಳನ್ನು ಬಳಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಡೆಂಘೀ ಹೆಚ್ಚಾಗದಂತೆ ಕ್ರಮ ವಹಿಸಬೇಕು. ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬೂಸಿಯ ಇವುಗಳನ್ನು ಬೆಳೆಸಿ ಜಿಲ್ಲೆಯಾದ್ಯಾಂತ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಗೆ ಅಗತ್ಯ ಬಿದ್ದಾಗ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಸಾರ್ವಜನಿಕರಿಗೆ ಒದಗಿಸಬೇಕು ಎಂದು ಸಲಹೆ ನೀಡಿದರು.

ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು

ಸ್ಥಳೀಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಣ, ಕಾರ್ಮಿಕ ಇಲಾಖೆ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಸಮಾಜ ಕಲ್ಯಾಣ ಇಲಾಖೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಲಾರ್ವಾ ಸಮೀಕ್ಷೆ ಕೈಗೊಂಡು ಸೊಳ್ಳೆಗಳ ನಿಯಂತ್ರಣಕ್ಕೆ ಪ್ರತಿನಿತ್ಯ ನಿಗಾವಹಿಸಬೇಕು ಎಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ಈ ಪ್ರಕರಣಗಳು ಹೆಚ್ಚಾಗದಂತೆ ಸ್ವಚ್ಛತೆಯ ಮುನ್ನೆಚ್ಚರಿಕಾ ಕ್ರಮಗಳಿಗ ಮುಂದಾಗಬೇಕು. ಜೊತೆಗೆ ಜಿಲ್ಲೆಯಾದ್ಯಂತ ಸಂಚಾರಿ ಪ್ರಚಾರದ ವಾಹನಗಳಲ್ಲಿ ಡೆಂಘೀ ಜ್ವರದ ತೀವ್ರತೆಯ ದುಷ್ಪರಿಣಾಮಗಳು ಹಾಗೂ ಸೊಳ್ಳೆಗಳ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಅದರಲ್ಲೂ ನಗರ ಪ್ರದೇಶಗಳ ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚು ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು. ವಾರಕ್ಕೊಮ್ಮೆ ಒಣ ದಿನ

ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಈವರೆಗೆ 178 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳಲ್ಲಿ ನಾಲ್ಕುಪಟ್ಟು ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಶೇ. 80 ರಷ್ಟು ಪ್ರಕರಣಗಳು ಗ್ರಾಮಾಂತರ ಪ್ರದೇಶದಲ್ಲಿ ದಾಖಲಾಗಿವೆ. ಆದ್ದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಕಾರ್ಯವನ್ನು ಸಮರೋಪಾಧಿಯಲ್ಲಿ ಕೈಗೊಳ್ಳಬೇಕಿದೆ. ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಶುಕ್ರವಾರ ಒಣಗಲು ದಿನವಾಗಿ ಆಚರಿಸಬೇಕು ಎಂದರು.

ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಬಳಸುವುದು. ಸೊಳ್ಳೆ ಕಚ್ಚದಂತೆ ಎಚ್ಚರವಹಿಸುವಂತೆ ಸಾರ್ವಜನಿಕರಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಅರಿವು ಮೂಡಿಸಿಬೇಕು.ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು. ಈ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಭಿತ್ತಿ ಪತ್ರ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಸಿಕೆಬಿ-3 ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಭಿತ್ತಿ ಪತ್ರ ಮತ್ತು ಕರಪತ್ರಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಬಿಡುಗಡೆ ಮಾಡಿದರು.

Share this article