ಪಡಿತರ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ

KannadaprabhaNewsNetwork |  
Published : May 01, 2026, 02:00 AM IST
30ಕೆಪಿಎಲ್21 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಧಾನ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ. ಆದ್ಯಾಗೂ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವ ಪ್ರಕರಣ ವರದಿಯಾಗಿದೆ

ಕೊಪ್ಪಳ: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಅಕ್ಕಿ ಕಳ್ಳ ಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆಗೆ ಅವಕಾಶ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಪ್ಪಳ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಧಾನ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ. ಆದ್ಯಾಗೂ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವ ಪ್ರಕರಣ ವರದಿಯಾಗಿದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ತ್ವರಿತವಾಗಿ ಕ್ರಮ ಕೈಗೊಳ್ಳುವುದರ ಜತೆಗೆ ಅವರ ಮೇಲೆ ಚಾರ್ಜ್ ಶೀಟ್ ಹಾಕುವ ವ್ಯವಸ್ಥೆಯಾಗಬೇಕು. ಅಕ್ರಮ ಪಡಿತರ ಚೀಟಿ ಮಾರಾಟಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿದ್ದು, ಇದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು.ಪಡಿತರ ವಿತರಣೆ ಜನರಿಗೆ ಅನುಕೂಲವಾಗುವಂತೆ ಮಾಡಿ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಕಾರ್ಯನಿರ್ವಹಿಸಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳಿ. ಆಹಾರ ಸಾಮಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಎಲ್ಲ ಅಧ್ಯಕ್ಷರು,ಸದಸ್ಯರು ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳು ತಮ್ಮ ಸಮಸ್ಯೆ ಪರಿಹರಿಸಲು ಸಿಡಿಪಿಓ ಕಚೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇದನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು. ಮರಣ ಹೊಂದಿದ ಫಲಾನುಭಿಗಳಿಗೆ ಸಹಾಯಧನ ಸಂದಾಯವಾಗುತ್ತಿದ್ದಲ್ಲಿ ತಕ್ಷಣ ಅದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿ ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ನೀಡುತ್ತಿರುವ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಬೇಕು. ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ ನಮ್ಮ ಜಿಲ್ಲೆಯಲ್ಲಿ ಸುಮಾರು ₹11 ಕೋಟಿ 22 ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಉಚಿತ ಬಸ್ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರವು ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ, ಈ ಮಹತ್ತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ರಾಜ್ಯ ಸರ್ಕಾರದ ಮಹತ್ತರ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳಡಿ ನಮ್ಮ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು. ಈ ಬಗ್ಗೆ ಹೆಚ್ಚಿನ ಪ್ರಚಾರ ಚಟುವಟಿಕೆ ಹಮ್ಮಿಕೊಳ್ಳಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಸಭೆ ನಡೆಯಬೇಕು. ಮೇ 16 ಮತ್ತು 17 ರಂದು ನಡೆಯುವ ಕನಕಗಿರಿ ಉತ್ಸವದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಳಿಗೆ ಹಮ್ಮಿಕೊಂಡು ಜನರಿಗೆ ಹೆಚ್ಚಿನ ಪ್ರಚಾರ ಮೂಡಿಸಲು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಅರ್ಜಿ ಹಾಕಿದ ಫಲಾನುಭವಿಗಳ ಪೈಕಿ ಕೆಲವರಿಗೆ ಗೃಹಲಕ್ಷ್ಮಿ ಯೋಜನೆ ಸಹಾಯಧನ ಸಿಗುತ್ತಿಲ್ಲ. ಇದಕ್ಕಾಗಿ ಸೂಕ್ತ ಕಾರಣ ಏನು ಮತ್ತು ಅದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುವುದರ ಬಗ್ಗೆ ಫಲಾನುಭವಿಗಳಿಗೆ ತಿಳಿಸಬೇಕು. ಮರಣ ಹೊಂದಿದ ಫಲಾನುಭವಿಗಳ ಮಾಹಿತಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆಯಾ ಗ್ರಾಪಂಗಳಿಗೆ ತಿಳಿಸುವ ಕೆಲಸ ಆಗಬೇಕು.ಗ್ರಾಮ ಸಭೆಗಳಲ್ಲಿಯೇ ಗ್ರಾಪಂ ಮಟ್ಟದ ಗ್ಯಾರಂಟಿ ಸಭೆ ನಡೆಸಲು ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಯುವನಿಧಿ ಪ್ಲಸ್ ಕಾರ್ಯಕ್ರಮ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಜಿಲ್ಲೆಯ ಎಲ್ಲ ಯುವನಿಧಿ ಫಲಾನುಭವಿಗಳು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ. ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ತಾಪಂ ಇಓ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಶಿರಹಟ್ಟಿಯ ಫಕೀರೇಶ್ವರ ರಥೋತ್ಸವ
ಎಚ್ಐವಿಗೆ ಸೂಕ್ತ ಚಿಕಿತ್ಸೆ ಪಡೆಯಲಿ: ಡಿ.ಎನ್. ಚಂದ್ರಶೇಖರ