ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪರಿಶಿಷ್ಟರ ಅಭಿವೃದ್ಧಿಗಾಗಿ ಇರುವ ಹಲವು ಕಾರ್ಯಕ್ರಮಗಳ ಪ್ರಯೋಜವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದು ಕೆಸಿಐಸಿ ಬೆಂಗಳೂರಿನ ಜಿಲ್ಲಾ ಕಾರ್ಯಕ್ರಮ ಸಂಯೋಜನಾಧಿಕಾರಿ ಜೆ.ನಿತೀಶ್ ಹೇಳಿದರು.ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕುವೆಂಪು ವಿವಿ ಹಾಗೂ ಸಹ್ಯಾದ್ರಿ ಕಲಾ ಕಾಲೇಜು ಸಹಯೋಗದಲ್ಲಿ ಉಚಿತ ಗಿಗ್ (ಜಿಐಜಿ) ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಯೋಚನೆ ಮಾಡುತ್ತಲೇ ಇರುತ್ತಾರೆ. ಆದರೆ, ಅವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಉದ್ಯೋಗದ ಬಗ್ಗೆ ಮಾಹಿತಿ ನೀಡಲು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಗಿಗ್ ಎಂಬ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿದರು.ಈ ತರಬೇತಿ ಕಾರ್ಯಗಾರದಲ್ಲಿ ಖಾಸಗಿ ಕಂಪನಿಗಳ ಉದ್ಯೋಗಗಳ ಬಗ್ಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳು ತಾವು ಓದುತ್ತಲೇ ಪಾರ್ಟ್ ಟೈಮ್ ಉದ್ಯೋಗ ಮಾಡಬಹುದು. ಆನ್‌ಲೈನ್ ಮೂಲಕವು ಉದ್ಯೋಗ ಪಡೆಯಬಹುದು. ಇದಕ್ಕೆ 1 ಸಾವಿರದಿಂದ 3 ಸಾವಿರ ದುಡಿಯಬಹುದಾಗಿದೆ. ಇದೊಂದು ಮಹತ್ವದ ಕಾರ್ಯಗಾರ. ಇದರಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಇದರಿಂದ ಸಹಾಯ ಧನ ಪಡೆಯಲು ಕೂಡ ಅನುಕೂಲವಾಗುತ್ತದೆ ಎಂದು ತಿಳಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್.ಮಂಜುನಾಥ್ ಮಾತನಾಡಿ, ನಮ್ಮ ಕಲಾ ಕಾಲೇಜಿನಲ್ಲಿ 1450 ವಿದ್ಯಾರ್ಥಿಗಳು ಇದ್ದಾರೆ. ಗ್ರಾಮೀಣ ಪ್ರದೇಶದವರೇ ಹೆಚ್ಚಾಗಿದ್ದಾರೆ. ಪರಿಶಿಷ್ಟ ಪಂಗಡದವರು ಇದ್ದಾರೆ. ಅವರೆಲ್ಲರಿಗೂ ಇಂತಹ ಕಾರ್ಯಗಾರಗಳಿಂದ ಆರ್ಥಿಕವಾಗಿ ಅನುಕೂಲವಾಗುತ್ತದೆ. ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.ಪ್ರಾಚಾರ್ಯ ಡಾ. ಸೈಯ್ಯದ್ ಸನಾವುಲ್ಲಾ ಮಾತನಾಡಿ, ಪರಿಶಿಷ್ಟರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಓರಿಯೇಂಟೆಷನ್ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಸ್ವಾಗತರ್ಹ. ನಮ್ಮ ಕಾಲೇಜಿನ ಮಕ್ಕಳು ಇದರ ಪ್ರಯೋಜನ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಜಗನ್ನಾಥ್, ಅಧಿಕಾರಿ ಹರೀಶ್ ಮುಂತಾದವರು ಇದ್ದರು. ಪ್ರಣತಿ ಪ್ರಾರ್ಥಿಸಿದರು. ಮೋನಿಕ ನಿರೂಪಿಸಿ ವಂದಿಸಿದರು.