ಕಳೆದ 15 ವರ್ಷಗಳಿಂದ ಅವ್ವ ಸೇವಾ ಟ್ರಸ್ಟ್ ಮೂಲಕ ಸಮಾಜದಲ್ಲಿ ಅವಿಸ್ಮರಣೀಯ ರೀತಿಯಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ.
ಶಿರಸಿ: ಅವ್ವ ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಶ್ಲಾಘನೀಯ. ಸಮಾಜದಲ್ಲಿ ತಂದೆ- ತಾಯಿ ಹೆಸರನ್ನು ಅಜರಾಮರವಾಗಿಸುವ ಜತೆಗೆ ಬಡವರ, ದೀನ- ದಲಿತರ, ಅಂಗವಿಕಲರ ಶ್ರೇಯೋಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿಪ್ರಾಯಪಟ್ಟರು.
ಬುಧವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇವರಿಂದ ಆಯೋಜಿಸಿದ್ದ ಉಪನ್ಯಾಸ ಹಾಗೂ ಎಫ್ಎಲ್ಎನ್ ಕಾರ್ಯಾಗಾರ- 2026 ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಳೆದ 15 ವರ್ಷಗಳಿಂದ ಅವ್ವ ಸೇವಾ ಟ್ರಸ್ಟ್ ಮೂಲಕ ಸಮಾಜದಲ್ಲಿ ಅವಿಸ್ಮರಣೀಯ ರೀತಿಯಲ್ಲಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಈ ಟ್ರಸ್ಟ್ನ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಆರೋಗ್ಯ ಸೇವೆ, ಪರಿಸರ ರಕ್ಷಣೆ ಹಾಗೂ ವಿಶೇಷಚೇತನರಿಗೆ ಆಸರೆ ನೀಡುವಂತಹ ಉದಾತ್ತ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಸೇವೆಯು ಶ್ಲಾಘನೀಯವಾಗಿದೆ ಎಂದರು.ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗಿರದೆ ಉತ್ತಮ ಸಂಸ್ಕಾರ ಮತ್ತು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಜ್ವಲಿಸುವಂತೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಆರ್ಥಿಕವಾಗಿ ದುರ್ಬಲರಾದವರು, ಅಂಗವಿಕಲರು ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡುವುದರ ಜತೆಗೆ ಉನ್ನತ ವ್ಯಾಸಂಗಕ್ಕೂ ಅವ್ವ ಸೇವಾ ಟ್ರಸ್ಟ್ ಮೂಲಕ ಸಹಾಯ ಮಾಡುತ್ತಿದೆ ಎಂದರು.ಕರ್ನಾಟಕ ರಾಜ್ಯ ಶಾಲಾ ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಅವರು ಅವ್ವ ಟ್ರಸ್ಟ್ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಶಿಭೂಷಣ ಹೆಗಡೆ, ಡಿಡಿಪಿಐ ಡಿ.ಆರ್. ನಾಯ್ಕ್, ಎಸ್.ಡಿ. ಮೂಡೆನ್ನವರ್ ಜಯಶ್ರೀ, ಡಾ. ಗೀತಾ ವಸಂತ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕಿರಣಕುಮಾರ ನಾಯ್ಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಾರಾಯಣ್ ದೈಮನೆ ಅವರು ಸ್ವಾಗತಿಸಿದರು. ಸವಿತಾ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.