ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯ ಯಕ್ಷಗಾನ ಕಲಾರಂಗದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2024ನೇ ಸಾಲಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ’ ನ.17ರಂದು ಮಧ್ಯಾಹ್ನ 3 ಗಂಟೆಗೆ ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಪ್ರಧಾನ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಯಕ್ಷ ವಿದ್ಯಾಪೋಷಕ್ ನ 75 ವಿದ್ಯಾರ್ಥಿಗಳಿಗೆ 6.42 ಲಕ್ಷ ರು. ಮೊತ್ತದ ಸಹಾಯಧನವನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ 23 ಮಂದಿ ಹಿರಿಯ ಕಲಾವಿದರಿಗೆ ತಲಾ 20 ಸಾವಿರ ನಗದು ಪುರಸ್ಕಾರ ಪ್ರಶಸ್ತಿ, ತೆಕ್ಕಟ್ಟೆಯ ಕೊಮೆ ಯಶಸ್ವಿ ಕಲಾವೃಂದ ಸಂಸ್ಥೆಗೆ 1 ಲಕ್ಷ ರು. ಮೊತ್ತದ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ ಹಾಗೂ ಯಕ್ಷಚೇತನ ಪ್ರಶಸ್ತಿಯನ್ನು ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್ ರಾವ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭ ವಾಸುದೇವ ಸಾಮಗರ 30 ಪ್ರಸಂಗಗಳ ‘ಯಕ್ಷ ರಸಾಯನ’ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ಇತ್ತೀಚೆಗೆ ನಿಧನ ಹೊಂದಿದ ಮೂರು ಮಂದಿ ಕಲಾವಿದರ ಕುಟುಂಬಿಕರಿಗೆ ಸಾಂತ್ವನ ನಿಧಿಯನ್ನು ನೀಡಲಾಗುವುದು. ಸಭಾ ಕಾರ್ಯಕ್ರಮದ ಮೊದಲು ಮಧ್ಯಾಹ್ನ 1.45ರಿಂದ ನವರಸಾಯನೆ: ಯಕ್ಷಗಾಯನ ಹಾಗೂ ಸಮಾರಂಭದ ಬಳಿಕ ಸಂಜೆ 5ರಿಂದ ಬಡಗುತಿಟ್ಟಿನ ಕಲಾವಿದರಿಂದ ಯಕ್ಷಗಾನ ಬಭ್ರುವಾಹನ ಕಾಳಗ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ಸದಸ್ಯರಾದ ಭುವನಪ್ರಸಾದ್ ಹೆಗ್ಡೆ, ನಿರಂಜನ್ ಭಟ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.