ಸೈಕಲ್ ಜಾಥಾ ಮೂಲಕ ಮತದಾನ ಕುರಿತು ಜಾಗೃತಿ

KannadaprabhaNewsNetwork | Published : Apr 5, 2024 1:02 AM

ಸಾರಾಂಶ

ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

ಸಂಡೂರು: ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ, ಪುರಸಭೆ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೈಕಲ್ ಜಾಥಾದ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ಸತೀಶ್, ಮತದಾನ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳ ಆಯ್ಕೆಯ ಹಕ್ಕು. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಶೇ.೭೧.೧೬ರಷ್ಟು ಮತದಾನವಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನಿಭೀತಿಯಿಂದ ಮತ ಚಲಾಯಿಸಬೇಕು ಎಂದರು.

ತಹಶೀಲ್ದಾರ್ ಜಿ. ಅನಿಲ್‌ಕುಮಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಇಒ ಎಚ್. ಷಡಾಕ್ಷರಯ್ಯ ಮಾತನಾಡಿ, ಕ್ಷೇತ್ರದಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಕಡಿಮೆ ಮತದಾನವಾದ ಬೂತ್ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಕ್ಷೇತ್ರದಲ್ಲಿ ಕನಿಷ್ಟ ಶೇ.೯೦ಕ್ಕಿಂತ ಹೆಚ್ಚು ಮತದಾನವಾಗುವಂತೆ ಎಲ್ಲರೂ ಶ್ರಮಿಸಬೇಕಿದೆ. ಪಟ್ಟಣ ಪ್ರದೇಶದಲ್ಲಿ ಅದರಲ್ಲೂ ವಿದ್ಯಾವಂತರು ಹೆಚ್ಚಿರುವ ಪ್ರದೇಶದಲ್ಲಿಯೇ ಕಡಿಮೆ ಮತದಾನವಾಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ೮೫ ವರ್ಷ ಮೇಲ್ಪಟ್ಟವರು ಮತಗಟ್ಟೆಗೆ ಬರಲಾಗುತ್ತಿಲ್ಲ ಎಂದಲ್ಲಿ, ಅವರ ಮನೆಯಲ್ಲಿಯೇ ಅವರು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ, ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಎಳೆ ನಾಗಪ್ಪ, ಶಿಕ್ಷಣ ಸಂಯೋಜಕ ಬಸವರಾಜ್, ಪ್ರಭುರಾಜ್ ಹಗರಿ, ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.೪ಎಸ್.ಎನ್.ಡಿ೧

ಸಂಡೂರಿನಲ್ಲಿ ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತದಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

Share this article