ಕನ್ನಡಪ್ರಭ ವಾರ್ತೆ ಕುಶಾಲನಗರ, ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಮತ್ತು ಪುರಸಭೆ ಸದಸ್ಯರು ಪಟ್ಟಣದ ಮುಖ್ಯ ರಸ್ತೆಯಲ್ಲಿ ತೆರಳಿ ವಿವಿಧ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಏಕಬಳಕೆ ಪ್ಲಾಸ್ಟಿಕ್ ನಿರ್ಬಂಧದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು. ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ, ಉಪಾಧ್ಯಕ್ಷರಾದ ಪುಟ್ಟ ಲಕ್ಷ್ಮಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ ಬಿ ಸುರೇಶ್ ಮತ್ತು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷರಾದ ಕೆ ಎಸ್ ನಾಗೇಶ್ ಅವರ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳು ಅಂಗಡಿ ಮಳಿಗೆಗಳಿಗೆ ತೆರಳಿ ಏಕ ಬಳಕೆ ಪ್ಲಾಸ್ಟಿಕ್ ಮತ್ತು ನೀರಿನ ಬಾಟಲ್ ಗಳನ್ನು ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಇತರೆ ಬ್ಯಾಗ್ ಗಳ ಬಳಕೆ ಮಾಡುವಂತೆ ಅರಿವು ಮೂಡಿಸಿದರು. ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳಿದರು. ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪರ್ಯಾಯವಾಗಿ ಬಟ್ಟೆ ಬ್ಯಾಗ್ ಗಳನ್ನು ಗ್ರಾಹಕರಿಗೆ ನೀಡಿ ಹಣ ಪಡೆಯುವ ಮೂಲಕ ವಿತರಣೆ ಕಾರ್ಯ ನಡೆಯಿತು. ಬೀದಿ ಬದಿ ವ್ಯಾಪಾರಿಗಳು ಮತ್ತು ತರಕಾರಿ ಅಂಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿರುವ ದೃಶ್ಯ ಕಂಡು ಬಂತು. ಮುಂದಿನ ದಿನಗಳಲ್ಲಿ ಇದೇ ರೀತಿ ನಿಯಮ ಪಾಲಿಸದೆ ಏಕಬಳಕೆ ಪ್ಲಾಸ್ಟಿಕ್ ನೀಡಿದಲ್ಲಿ ವರ್ತಕರಿಗೆ 500 ರು. ರಂತೆ ದಂಡ ವಿಧಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದರು. ಈ ಅಭಿಯಾನ ಮುಂದಿನ ದಿನಗಳಲ್ಲಿ ನಿರಂತರವಾಗಿ ನಡೆಯಲಿದೆ ಎಂದು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ಕೆ ಎಸ್ ನಾಗೇಶ್ ಮತ್ತು ಹಿರಿಯ ಆರೋಗ್ಯ ಅಧಿಕಾರಿ ಉದಯ್ ಕುಮಾರ್ ತಿಳಿಸಿದರು. ಈ ಸಂದರ್ಭ ಪುರಸಭೆ ಸದಸ್ಯರಾದ ಜಯವರ್ಧನ್, ಅಮೃತ ರಾಜ್, ಪ್ರಕಾಶ್, ನವೀನ್ ಪುರಸಭೆ ಹಿರಿಯ ಆರೋಗ್ಯ ಅಧಿಕಾರಿ ಉದಯಕುಮಾರ್ ಮತ್ತು ಸಿಬ್ಬಂದಿ, ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಚಿತ್ರ ರಮೇಶ್, ಎಂ ವಿ ಬಾಬು, ಪ್ರಮುಖರಾದ ಪೊನ್ನಚನ ಮೋಹನ್, ಎಂ ಡಿ ರಂಗಸ್ವಾಮಿ, ಚಂದ್ರು, ಪಿ ಪಿ ಸತ್ಯನಾರಾಯಣ ಮತ್ತಿತರರು ಇದ್ದರು.