ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾಡಳಿತ ವತಿಯಿಂದ ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹದಿಹರೆಯದ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹಾಗೂ ಆಪ್ತ ಸಮಾಲೋಚನೆ ಕುರಿತು ಅರಿವು ಕಾರ್ಯಕ್ರಮ, ಪ್ರತಿಜ್ಞಾವಿಧಿ ಸ್ವೀಕಾರ ಮತ್ತು ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮವು ಇತ್ತೀಚೆಗೆ ನಗರದ ಉದ್ಯಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್ ಕುಂದರ್ ಅರಿವು ಕಾರ್ಯಕ್ರಮ ಉದ್ಘಾಟಿಸಿದರು.
ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ ಮಾತನಾಡಿ, ಮಕ್ಕಳ ರಕ್ಷಣೆಗಾಗಿಯೇ ಹಕ್ಕುಗಳು ಹಾಗೂ ಕಾಯ್ದೆಗಳು ಇವೆ. ಹದಿಹರೆಯದ ವಯಸ್ಸಿಗೆ ಅಗತ್ಯವಾದ ಪೂರಕ ಮಾಹಿತಿ ನೀಡುವ ಈ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೋಳಾರುಗುಡ್ಡೆ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮೂಕಾಂಬೆ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡುವ ಉದ್ದೇಶದಿಂದ ಪ್ರಾರಂಭವಾದ ಈ ಕಾರ್ಯಕ್ರಮವನ್ನು ತಮ್ಮ ಶಾಲೆಯಲ್ಲಿ ಹಮ್ಮಿಕೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗಿರೀಶ್ ಎಂ.ಎನ್. ವಿದ್ಯಾರ್ಥಿಗಳಿಗೆ ಹದಿಹರೆಯದ ವಯಸ್ಸಿನ ಮಾನಸಿಕ ಆರೋಗ್ಯ ಮತ್ತು ಆಪ್ತ ಸಮಾಲೋಚನೆ, ಅಂತರ್ಜಾಲದ ದುಷ್ಪರಿಣಾಮ ವಿಷಯಗಳ ಕುರಿತು ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಶಾರದಾ ವೈ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಬೋಳಾರುಗುಡ್ಡೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.