ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಜನರು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಹೇಳಿದರು.
ಮೂಡುಬಿದಿರೆ: ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಜನರು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಹೇಳಿದರು.
ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ, ಮೂಡುಬಿದಿರೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ''''''''ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನ''''''''ದ ಅಂಗವಾಗಿ ನಡೆದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾದಕ ದ್ರವ್ಯ ವ್ಯಸನವು ಇಂದಿನ ಸಮಾಜ ಎದುರಿಸುತ್ತಿರುವ ಗಂಭೀರ ಸವಾಲಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವಜನರು ಕುತೂಹಲ, ಸ್ನೇಹಿತರ ಒತ್ತಡ ಅಥವಾ ಕ್ಷಣಿಕ ಆಕರ್ಷಣೆಗೆ ಒಳಗಾಗಿ ಮಾದಕ ವಸ್ತುಗಳ ಸೇವನೆಗೆ ಮುಂದಾಗಬಾರದು. ವ್ಯಸನಕ್ಕೆ ಒಳಗಾದ ಬಳಿಕ ಅದರಿಂದ ಹೊರಬರುವುದು ಕಷ್ಟವಾಗಬಹುದು. ಆದ್ದರಿಂದ ವ್ಯಸನಕ್ಕೆ ತುತ್ತಾಗುವುದಕ್ಕಿಂತ ಮುನ್ನವೇ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಬೇಕು ಎಂದರು.ಅಭಿಯಾನದ ಅಂಗವಾಗಿ ಆಳ್ವಾಸ್ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ 40 ಎಂಬಿಬಿಎಸ್ ವಿದ್ಯಾರ್ಥಿಗಳು ಮೂಡುಬಿದಿರೆಯ ನಿಶ್ಮಿತಾ ಟವರ್ಸ್ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶಿಸಿದರು. ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳು, ವ್ಯಸನದ ಸುಳಿಗೆ ಸಿಲುಕದಂತೆ ವಹಿಸಬೇಕಾದ ಎಚ್ಚರಿಕೆ ಹಾಗೂ ವ್ಯಸನಮುಕ್ತ ಜೀವನದ ಮಹತ್ವವನ್ನು ನಾಟಕದ ಮೂಲಕ ಪರಿಣಾಮಕಾರಿಯಾಗಿ ಅಭಿನಯಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ ಹಾಗೂ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಡಾ. ಮೀನಾ ಕಿರಣ್, ಡಾ. ಜಯಪ್ರಕಾಶ್, ಡಾ. ಹರ್ಷಿತ್, ಡಾ. ಕೃಷ್ಣ ಉಣ್ಣಿ, ಡಾ. ಅರುಣ್ ಹಾಗೂ ಡಾ. ಶ್ವೇತಾ ಬೀದಿ ನಾಟಕದ ನಿರ್ದೇಶನ ಮತ್ತು ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.