ಮಂಗನ ಕಾಯಿಲೆ ತಡೆಯಲು ಜಾಗೃತಿ ಮುಖ್ಯ: ಡಿಸಿ ವಿದ್ಯಾಕುಮಾರಿ

KannadaprabhaNewsNetwork |  
Published : Feb 07, 2024, 01:51 AM IST
ಡಿಸಿ ಸಭೆ | Kannada Prabha

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಮಂಗನ ಕಾಯಿಲೆಯ ಜಾಗೃತಿ ಮೂಡಿಸುವ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ರಾಜ್ಯದಲ್ಲಿ 46 ಮಂಗನ ಕಾಯಿಲೆ ಪ್ರಕರಣಗಳು ಕಂಡುಬಂದಿದ್ದು, ಒಬ್ಬರು ಮರಣ ಹೊಂದಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರು ಆಗಮಿಸಿದಾಗ ಅವರಿಗೂ ಸಹ ಈ ರೋಗದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.

ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕ್ಯಾಸನೂರು ಫಾರೆಸ್ಟ್ ಡಿಸೀಸ್ ಎಂಬುದು ಮಂಗಗಳು ಸಾವನ್ನಪ್ಪಿ ಅವುಗಳಿಂದ ಉಂಟಾಗುವ ಉಣ್ಣೆಗಳು ಕಚ್ಚುವಿಕೆಯಿಂದ ಹರಡುವ ಕಾಯಿಲೆಯಾಗಿದೆ. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದ ಅವರು, ಆ ರೀತಿಯ ಮಂಗಗಳು ಸತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕಾಡು ಹಾಗೂ ಕಾಡಂಚಿನಲ್ಲಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶು ಪಾಲನಾ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಈ ಕಾಯಿಲೆ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು ಎಂದರು.

* ಮಾ.3ರಂದು ಪಲ್ಸ್ ಪೋಲಿಯೋ

ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕು. ಪ್ರತಿಶತಃ ನೂರರಷ್ಟು ಲಸಿಕೆ ಹಾಕಿಸಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದರು.

* 1846 ಎಂಡೋ ಪೀಡಿತರಿದ್ದಾರೆ

ಜಿಲ್ಲೆಯಲ್ಲಿ 1846 ಎಂಡೋಸಲ್ಫಾನ್ ಪೀಡಿತರಿದ್ದು, ಅವರಲ್ಲಿ 158 ಜನ ಮರಣ ಹೊಂದಿದ್ದು, 1649 ಜನರಿಗೆ ಪ್ರತೀ ತಿಂಗಳು ಮಾಸಾಶನವನ್ನು ನೀಡಲಾಗುತ್ತಿತ್ತು. ಕಳೆದೆರೆಡು ತಿಂಗಳಿನಿಂದ ಮಾಸಾಶನ ಸಿಗುತ್ತಿಲ್ಲ ಎಂಬ ಬಗ್ಗೆ ದೂರುಗಳೂ ಕೇಳಿ ಬರುತ್ತಿವೆ. ಅಂಗವಿಕಲರ ಕಲ್ಯಾಣಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ, ಪ್ರತಿಯೊಬ್ಬರಿಗೂ ಮಾಸಾಶನ ದೊರೆಯುವಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

* ಸಾಂಕ್ರಮಿಕರೋಗ ತಡೆಯಿರಿ

ಪ್ರತಿಯೊಬ್ಬ ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸಾಮಾನ್ಯವಾಗಿ ಸೊಳ್ಳೆಗಳು ಸಂತಾನೋತ್ಪತ್ತಿಯನ್ನು ನಿಂತ ನೀರಿನಲ್ಲಿ ನಡೆಸಿ, ಸೊಳ್ಳೆಗಳ ತಾಣವಾಗಿ ಅವುಗಳು ಮಲೇರಿಯಾ, ಡೆಂಗ್ಯೂ, ಚಿಕನ್ ಗೂನ್ಯಾ ಗಳಂತಹ ರೋಗಗಳನ್ನು ಹರಡುತ್ತವೆ. ನೀರು ಎಲ್ಲೆಂದರಲ್ಲಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಾಗರತ್ನ, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ