ಕೊಪ್ಪಳ: ದೇಶದಲ್ಲಿ ಅರಾಜಕತೆ ಹುಟ್ಟುಹಾಕಲು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಶತಾಯ-ಗತಾಯ ಶ್ರಮಿಸುತ್ತಿದ್ದು, ಇದನ್ನು ಅಳಿಸಿ, ಪ್ರಜಾಪ್ರಭುತ್ವವನ್ನು ಉಳಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಬಳ್ಳಾರಿ ವಿಭಾಗ ಮಟ್ಟದ ಜಾಗೃತಿ ಮೆರವಣಿಗೆಯನ್ನು ಕೊಪ್ಪಳದಲ್ಲಿ ಶುಕ್ರವಾರ ನಡೆಸಲಾಯಿತು.
ಮೆರವಣಿಗೆಯಲ್ಲಿ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’, ‘ಅರ್ಹ ಮತದಾರರ ಹಕ್ಕುಗಳನ್ನು ಸಂರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗುತ್ತಾ ಅಶೋಕ ವೃತ್ತದಲ್ಲಿ ಬಹಿರಂಗ ಭಾಷಣ ಮಾಡಿದ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಪ್ರತಿಯೊಬ್ಬ ಅರ್ಹ ನಾಗರಿಕನ ಅಮೂಲ್ಯ ಹಕ್ಕಾಗಿದೆ. ಈ ಹಕ್ಕಿನ ರಕ್ಷಣೆ ಮಾಡುವುದು ಸರ್ಕಾರ, ಚುನಾವಣಾ ಆಯೋಗ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತದಾರರ ಹಕ್ಕುಗಳ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಜನರ ಹಕ್ಕುಗಳ ರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಜನತೆ ಬಿಜೆಪಿಯ ಪರವಾಗಿ ನಿಲ್ಲಲಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಸಹಪ್ರಭಾರಿ ಡಾ. ಕಾಸಿಂ ವೆಂಕಟೇಶ್ವರಲು, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಮುಖಂಡರಾದ ಮಹೇಶ್ ತೆಂಗಿನಕಾಯಿ, ಹಾಲಪ್ಪ ಆಚಾರ್, ದೊಡ್ಡನಗೌಡ ಪಾಟೀಲ್, ಸೋಮಶೇಖರ್ ರೆಡ್ಡಿ, ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಶಿವರಾಮಗೌಡ, ಡಾ. ಬಸವರಾಜ ಕ್ಯಾವಟರ್, ನವೀನ್ ಗುಳಗಣ್ಣವರ್ ಪಾಲ್ಗೊಂಡಿದ್ದರು.