ಬೆಳೆ ವಿಮೆ ನೋಂದಣಿ ಅರಿವು ರೈತರಿಗೆ ಅಗತ್ಯ:ಡೀಸಿ ಡಾ. ಎನ್. ಶಿವಶಂಕರ್

KannadaprabhaNewsNetwork |  
Published : Jul 03, 2024, 12:19 AM IST
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಂ.ಗ್ರಾ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.. | Kannada Prabha

ಸಾರಾಂಶ

ಆಯಾ ತಾಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ, ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವುದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಹೋಬಳಿ ಮಟ್ಟದಲ್ಲಿ ವಾರಕ್ಕೊಮ್ಮೆ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ರೈತರ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ ಜೊತೆಗೆ ಬೆಳೆ ವಿಮೆ ನೋಂದಣಿಗೆ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

ಪಿಎಂ ಫಸಲ್‌ ಬಿಮಾ ಯೋಜನೆ:

ಪ್ರಸಕ್ತ ವರ್ಷದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಕಳೆದ ಬಾರಿಗಿಂತ ಹೆಚ್ಚಿನ ಮಟ್ಟದಲ್ಲಿ ನೋಂದಣಿಯಾಗಿ ಗುರಿಯನ್ನು ಸಾಧಿಸಬೇಕು ಈ ಹಿನ್ನೆಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಡಿ ಬರುವ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳುಗಡೆ,ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ ಎಂದರು.

ರಾಗಿ, ಭತ್ತ ಸೇರಿ ಇತರ ಬೆಳೆಗಳಿಗೆ ಅನುಕೂಲ:

ಆಯಾ ತಾಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ, ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಜೆ, ರೇಷ್ಮೆ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ್, ತಾಲೂಕು ಸಹಾಯಕ ಕೃಷಿ, ತೋಟಗಾರಿಕೆ ನಿರ್ದೇಶಕರು, ವಿಮಾ ಪಾಲಿಸಿ ಕಂಪನಿಗಳ ಮುಖ್ಯಸ್ಥರು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

ನೋಂದಣಿ ಪ್ರಕ್ರಿಯೆ ಕುರಿತು ಜಾಗೃತಿ:

ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಮತ್ತು ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ಅಂತಿಮ ದಿನದವರೆಗೆ ಕಾಯದೆ ರೈತರು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸುವುದು. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಿ, ಕೊನೆಯ ದಿನಾಂಕದವರೆಗೆ ವಿಳಂಬಿಸದೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.

ಹವಾಮಾನ ಆಧಾರಿತ ತೋಟಗಾರಿಕೆ ಬೆಳೆ ವಿಮೆಗೆ ನೋಂದಾಯಿಸಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ಧ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ವರ್ಷದಲ್ಲಿ ಭಾರತದ ಅಭಿವೃದ್ಧಿ : ಶ್ರೀ ಶ್ರೀ
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ