ಕನ್ನಡಪ್ರಭ ವಾರ್ತೆ ರಾಯಚೂರು
ಜನರ ಆರ್ಥಿಕ ಸ್ಥಿತಿ ಸುಧಾರಣೆಯಾದಾಗ ಮಾತ್ರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ ಸುಧಾರಣೆಯಾಗಲು ಸಾಧ್ಯ. ಆದ್ದರಿಂದ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ನಿಡಲಾಗುವ ವಿವಿಧ ಯೋಜನೆಗಳನ್ನು ಸರಿಯಾದ ರಿತಿಯಲ್ಲಿ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆ, ಲಿಂಗಸುಗೂರು, ದೇವದುರ್ಗ, ಮಾನ್ವಿ ಪುರಸಭೆಗಳು ಹಾಗೂ ಕವಿತಾಳ, ಸಿರವಾರ, ಹಟ್ಟಿ ಪಪಂಗಳ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಯೋಜನೆ ಕುರಿತು ಜಾಗೃತಿ ಹಾಗೂ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬೀದಿ ಬದಿ ವ್ಯಾಪಾರ ಮಾಡುವ ಬಡವರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಪ್ರಮುಖವಾದ ಯೋಜನೆಯೆಂದರೆ ಅದು ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ ಯೋಜನೆಯಾಗಿದೆ. ಈ ಯೋಜನೆಯಡಿ ಜನರನ್ನು ಸ್ವಾವಲಂಬಿ, ಸ್ವಯಂ ಉದ್ಯೋಗ ಮತ್ತು ಕೌಶಲ್ಯ ಹೆಚ್ಚಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ ಎಂದರು.
ಬೀದಿ ಬದಿ ವ್ಯಾಪಾರಿಗಳು, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಈ ಯೋಜನೆಯಡಿ ಸಾಲ ಸೇರಿ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತದೆ. ಜನರು ಆರ್ಥಿಕತೆಯ ಯೋಜನೆಗಳ ಬಗ್ಗೆ ತಿಳಿದುಕೊಂಡು ಜಾಗೃತರಾಗಿ ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.ಪ್ರಮುಖವಾಗಿ ಕೋವಿಡ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿನ ತೊಂದರೆ ಅನುಭವಿಸಿದ್ದರು, ಆರ್ಥಿಕವಾಗಿ ಬಹಳ ಕುಗ್ಗಿದ್ದರು, ಈ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಆತ್ಮನಿರ್ಭರ್ ನಿಧಿ ಯೋಜನೆಯಡಿ ಕಿರು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಹಂತ ಹಂತವಾಗಿ ಈ ಸೌಲಭ್ಯದ ಮೊತ್ತವನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಿಬೂಬ್ ಜಿಲಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಹಾಗೂ ಕ್ಯೂಆರ್‌ಕೊಡ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ್, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಉಪ್ಪು ರವಿ, ಮಾನವಿ ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಮುದಗಲ್ ಪುರಸಭೆ ಮುಖ್ಯಾಧಿಕಾರಿ ನವೀನ್, ಜಿಲ್ಲಾ ಕೌಶಲ್ಯ ಮಿಷನ್ ವ್ಯವಸ್ಥಾಪಕ ಸುರೇಶ ವಿಬೂತಿ, ರಸೂಲ್, ನವೀನ್, ನಗರಸಭೆ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿ ಇತರರು ಇದ್ದರು.