- ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ತಾಲೂಕು ಕಚೇರಿ ಆವರಣದಲ್ಲಿ ಚಾಲನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪರಿಶಿಷ್ಟ ಜಾತಿ, ವರ್ಗದವರ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಆಶಯದಂತೆ ಈ ಸಾಮಾಜಿಕ ಪಿಡುಗನ್ನು ತೊಡೆದು ಹಾಕಲು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಡಾ. ಸುಮಂತ್ ಹೇಳಿದರು.ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನವ ಜೀವನ ಚಾರಿಟೆಬಲ್ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ನಾಗರಿಕ ಹಕ್ಕು ರಕ್ಷಣಾ ಕಾಯಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬುಧವಾರ ತಾಲೂಕು ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಕೈ ಗೊಳ್ಳುವ ಮೂಲಕ ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಮಾತನಾಡಿ, ಸವರ್ಣೀಯರಿಂದ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ ಆಗುತ್ತಿರುವ ದೌರ್ಜನ್ಯದ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲು ತಾಲೂಕಿನ ಎಲ್ಲಾ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ 5 ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.ಮಹಿಳಾ ಠಾಣೆ ಸಬ್‌ಇನ್ಸ್‌ಪೆಕ್ಟರ್ ನಂದಿನಿ ಶೆಟ್ಟಿ ಮಾತನಾಡಿ, ದೌರ್ಜನ್ಯದ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯ, ದೌರ್ಜನ್ಯ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಸರ್ಕಾರದ ನಿಯಮದಂತೆ ಇಲಾಖೆಯಿಂದ ಈ ಜನಾಂಗದವರಿಗೆ ಸಂಪೂರ್ಣ ರಕ್ಷಣೆ ಒದಗಿಸಲು ಬದ್ಧವಾಗಿರುವುದಾಗಿ ತಿಳಿಸಿದರು.ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ಮಾತನಾಡಿ, ಪ.ಜಾ, ಪ.ಪಂ ಜನರು ವಾಸಿಸುವ ಎಲ್ಲಾ ಸ್ಥಳಗಳಲ್ಲಿ ಅವರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಸರ್ಕಾರದ ಆದೇಶದಂತೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.ಈ ಸಂದರ್ಭದಲ್ಲಿ ಮಹಿಳಾ ಠಾಣೆಯ ಹಿರಿಯ ಅಧಿಕಾರಿಗಳಾದ ಗಾಯತ್ರಿ, ಮಂಜುಳಾ ಹಾಜರಿದ್ದರು. 12 ಕೆಸಿಕೆಎಂ 3ಚಿಕ್ಕಮಗಳೂರಿನ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರ್ ಡಾ. ಸುಮಂತ್ ಅವರು ಜಾಥಕ್ಕೆ ಚಾಲನೆ ನೀಡಿದರು. ತಾಪಂ ಕಾರ್ಯನಿರ್ವಹಕ ಅಧಿಕಾರಿ ವಿಜಯಕುಮಾರ್, ಎಚ್.ಡಿ. ರೇವಣ್ಣ, ನಂದಿನಿ ಶೆಟ್ಟಿ, ಗಾಯತ್ರಿ ಇದ್ದರು.