ಕನ್ನಡಪ್ರಭ ವಾರ್ತೆ ಉಡುಪಿ
ಆಯುರ್ವೇದ ಔಷಧಿ ಪದ್ಧತಿಯನ್ನು ಕೂಡ ಆಯುಷ್ಮಾನ್ ಭಾರತ ಯೋಜನೆಯಡಿಯಲ್ಲಿ ಸೇರಿಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಭಾನುವಾರ ಇಲ್ಲಿನ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸಮ್ಮಿಲನ ‘ಪ್ರಜ್ಯೋತಿ – 2023’ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, ತಮ್ಮ ಆಸ್ಪತ್ರೆಗೆ ಬರುವ ರೋಗಿಗಳು ಇಲ್ಲಿನ ಹಳೆ ವಿದ್ಯಾರ್ಥಿಗಳ ಮೇಲಿನ ವಿಶ್ವಾಸದಿಂದ ಬರುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಕಾಲೇಜಿನ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್., ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಡಾ.ನಾರಾಯಣ ಟಿ. ಅಂಚನ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಡಾ.ಭರತೇಶ್ ಎ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಡಾ.ಮೊಹಮ್ಮದ್ ಇಕ್ಬಾಲ್ ವಂದಿಸಿದರು. ಸಹಪ್ರಾಧ್ಯಾಪಕರಾದ ಡಾ. ಅರುಣ್ ಕುಮಾರ್ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ಶುಭ ಪಿ.ಯು ನಿರೂಪಿಸಿದರು.1994ನೇ ವರ್ಷದ ಹಳೆವಿದ್ಯಾರ್ಥಿ, ಪ್ರಸ್ತುತ ಹಾಗೂ ಬಳ್ಳಾರಿಯ ಶ್ರೀನಿವಾಸ ಕ್ಲಿನಿಕ್‍ನ ಡಾ. ಗೋಪಿಕೃಷ್ಣರವರು ‘ಕ್ಲಿನಿಕಲ್ ಎಪ್ಲಿಕೇಶನ್ ಆಫ್ ರಸೌಷಧೀಸ್ ಇನ್ ಜನರಲ್ ಪ್ರಾಕ್ಟೀಸ್’ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಿದರು.
ಗುರುವಂದನಾ ಕಾರ್ಯಕ್ರಮದಲ್ಲಿ ರೋಗನಿದಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ವಿ. ಪ್ರಸನ್ನರನ್ನು ಸನ್ಮಾನಿಸಲಾಯಿತು. ಹಳೆವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.