ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿ.ಎಂ.ಪ್ರಕಾಶ್ ಮತ್ತು ಉಪಾಧ್ಯಕ್ಷರಾಗಿ ಸಿ.ಧನರಾಜ್ ಅವಿರೋಧವಾಗಿ ಆಯ್ಕೆಯಾದರು.ಆಡಳಿತ ಮಂಡಳಿಯ ಒಟ್ಟು 12 ನಿರ್ದೇಶಕ ಸ್ಥಾನಗಳ ಪೈಕಿ 7 ಸ್ಥಾನಗಳಿಗೆ ಅ.5ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಮಂದಿ ಹಾಗೂ ಜೆಡಿಎಸ್ ಬೆಂಬಲಿತ ಒಬ್ಬರು ನಿರ್ದೇಶಕರು ಗೆಲುವು ಸಾಧಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಒಂದು ಸ್ಥಾನ ಸೇರಿದಂತೆ ‘ಎ’ ತರಗತಿಯಿಂದ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಆಯ್ಕೆಯಾಗಬೇಕಿದ್ದ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ 5 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಸೋಮವಾರ ನಡೆದ ಚುನಾವಣೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ನಿರ್ದೇಶನದಂತೆ ಅಧ್ಯಕ್ಷ ಸ್ಥಾನಕ್ಕೆ ಬ್ರಹ್ಮದೇವರಹಳ್ಳಿ ಎ ತರಗತಿಯಿಂದ ಆಯ್ಕೆಯಾಗಿದ್ದ ಬಿ.ಎಂ.ಪ್ರಕಾಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಾಯಿಗೋನಹಳ್ಳಿ ಕ್ಷೇತ್ರದಿಂದ ಚುನಾಯಿತರಾಗಿದ್ದ ಸಿ.ಧನರಾಜ್ ಹೊರತುಪಡಿಸಿ ಬೇರ್‍ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವಿರೋಧವಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಆದರ್ಶ ಪ್ರಕಟಿಸಿದರು.ಸಂಘದ ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಅವಿರೋಧ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ವೇಳೆ ನೂತನ ಅಧ್ಯಕ್ಷ ಬಿ.ಎಂ.ಪ್ರಕಾಶ್ ಮಾತನಾಡಿ, ನಿವೃತ್ತ ಶಿಕ್ಷಕನಾಗಿದ್ದರೂ ಸಹಕಾರ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿ ರೈತರ ನಾಡಿಮಿಡಿತ ಅರಿತಿದ್ದೇನೆ. ತಾಲೂಕಿನ ರೈತರ ಅನುಕೂಲಕ್ಕಾಗಿ ಹಿರಿಯ ಸಹಕಾರಿ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ಈ ಸಂಸ್ಥೆ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಹೊಸ ಯೋಜನೆ ರೂಪಿಸಲಾಗುವುದು ಎಂದರು.ರೈತರಿಗೆ ದೊರಕಬಹುದಾದ ಸೌಲಭ್ಯ ತಲುಪಿಸುವ ಜೊತೆಗೆ, ಸಂಸ್ಥೆ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚು ಮಾಡಿ, ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಆಡಳಿತ ಮಂಡಳಿ ಎಲ್ಲ ನಿರ್ದೇಶಕರ ಮತ್ತು ಹಿರಿಯ ಸಹಕಾರಿಗಳ ಸಲಹೆ ಮಾರ್ಗದರ್ಶನ ಪಡೆದು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ನೂತನ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್ ಸನ್ಮಾನಿಸಿದರು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಸಂಸ್ಥೆ ನೂತನ ನಿರ್ದೇಶಕರಾದ ಎನ್.ಟಿ.ಕೃಷ್ಣಮೂರ್ತಿ, ಸಿ.ಜಿ.ಸುರೇಂದ್ರ, ಲಕ್ಷ್ಮಣಗೌಡ, ಡಿ.ಕೃಷ್ಣೇಗೌಡ, ಎನ್.ಕೆ.ವಸಂತಮಣಿ, ಜೆ.ಆಶಾ, ಎನ್.ಉಜ್ವಲ, ಕೆ.ವಿ.ದಿನೇಶ್, ಎ.ಕುಮಾರ್, ಮರೀಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಜಿಪಂ ಮಾಜಿ ಸದಸ್ಯ ಎಂ.ಪ್ರಸನ್ನ, ಎಸ್‌ಎಲ್‌ಡಿಬಿ ನಿರ್ದೇಶಕ ತಿಮ್ಮರಾಯಿಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚಿಣ್ಯ ವೆಂಕಟೇಶ್, ಮುಖಂಡರಾದ ಡಿ.ಕೆ.ಸುರೇಶ್, ಸಂಪತ್‌ಕುಮಾರ್, ಹನುಮಂತು, ಆರ್.ಕೃಷ್ಣೇಗೌಡ, ತ್ಯಾಪೇನಹಳ್ಳಿ ಶ್ರೀನಿವಾಸ್, ಎಸ್.ಬಿ.ರಮೇಶ್ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.