ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯದಲ್ಲಿ 3.80 ಕೋಟಿ ರು. ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಂ118ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವನ ನಿರ್ಮಾಣಕ್ಕೆ ಅನುದಾನ ಕೊರತೆ ಉಂಟಾದರೆ ಹೆಚ್ಚುವರಿ ಅನುದಾನ ಪಡೆದು ನಿರ್ಮಿಸಲಾಗುವುದು ಎಂದರು.
ದೇಶ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸಿದ ಮಹನೀಯರ ಕುರಿತು ಯುವ ಪೀಳಿಗೆಗೆ ಅರಿವು ಮೂಡಿಸುವ ಸಲುವಾಗಿ ಅನೇಕ ಸಾಧಕರ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ. 1935ರಲ್ಲಿ ಅಖಿಲ ಭಾರತ ಶೋಷಿತ ಸಮುದಾಯಗಳ ಹೋರಾಟ ಸಮಿತಿ ರಚಿಸಿ ಅಸ್ಪೃಶ್ಯತೆ ವಿರುಧ್ಧ ಹೊರಾಡಿದವರೂ ಬಾಬು ಜಗಜೀವನ ರಾಂ ಎಂದರು.ಬಾಬು ಜಗಜೀವನ ರಾಂ ಸುದೀರ್ಘ 30 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದರು. ನಂತರ ಭಾರತದ ಉಪ ಪ್ರಧಾನಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ವೃತ್ತಿ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಗೆ ಶೋಷಿತರ ಏಳಿಗೆಗಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.
ಶಾಸಕ ಪಿ.ರವಿಕುಮಾರ್ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಬಾಬು ಜಗಜೀವನ್ ರಾಂ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚರ್ಚ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜಿನ ಮಕ್ಕಳಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮೈಷುಗರ್ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಕೆ.ಆರ್ ನಂದಿನಿ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಮಂಜು, ಡಾ. ಬಾಬು ಜಗಜೀವನ ರಾಂ ಸಂಘದ ಜಿಲ್ಲಾ ಅಧ್ಯಕ್ಷ ಎನ್. ಆರ್.ಚಂದ್ರ, ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್.ಸಂದೇಶ್, ದಲಿತ ಸಮಾಜದ ಮುಖಂಡರಾದ ಕೃಷ್ಣ, ಸಿ.ಕೆ.ಪಾಪಯ್ಯ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಮಂಡ್ಯ:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬಾಬು ಜಗಜೀವನ್ ರಾಮ್ ರವರ 118ನೇ ಜನ್ಮದಿನಾಚರಣೆ ಅಂಗವಾಗಿ ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಡೀಸಿ ಡಾ. ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಕೆ.ಆರ್ ನಂದಿನಿ ಹಾಗೂ ನಗರಸಭೆ ಅಧ್ಯಕ್ಷ ಎಂ.ವಿಯಪ್ರಕಾಶ್ ಮಾಲಾರ್ಪಣೆ ಮಾಡಿದರು.
ನಂತರ ವರ್ಣ ರಂಜಿತ ರಥದಲ್ಲಿ ಡಾ.ಬಾಬು ಜಗಜೀವನ್ ರಾವ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಸಿರು ಬಾವುಟ ಪ್ರದರ್ಶಿಸಿಸುವ ಮೂಲಕ ಡೀಸಿ, ಸಿಇಒ ಮೆರವಣಿಗೆಗೆ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಟಮಟೆ, ಪೂಜಾ ಕುಣಿತ, ಪೂರ್ಣಕುಂಭ ಹೊತ್ತು ಮಹಿಳೆಯರ ತಂಡ ಜಿಲ್ಲಾಧಿಕಾರಿಗಳ ಕಛೇರಿಯಿಂದ ನಗರದ ಡಾ. ಬಿ.ಆರ್ . ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ಸಾಗಿತು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್, ನಗರಸಭೆ ಅಧ್ಯಕ್ಷ ಎಂ,ವಿ ಪ್ರಕಾಶ್, ನಗರಸಭೆ ಪೌರಾಯುಕ್ತ ಪಂಪ ಶ್ರೀ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ ಸೇರಿದಂತೆ ಇನ್ನಿತರರು ಮರೆವಣಿಗೆಯ ಜೋತೆ ಸಾಗಿದರು.