ಕನ್ನಡಪ್ರಭ ವಾರ್ತೆ ಹನೂರು
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸಿ, ಗ್ರಾಮೀಣ ಭಾಗದ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಕ್ರೀಡಾಂಗಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದರು. ಪ್ರತಿಭೆಗಳಿಗೆ ಸೂಕ್ತ ವೇದಿಕೆ ಮತ್ತು ತರಬೇತಿ ಸೌಲಭ್ಯಗಳು ದೊರೆತಾಗ ಮಾತ್ರ ಕ್ರೀಡಾಪಟುಗಳು ನಿರಂತರ ಅಭ್ಯಾಸ ನಡೆಸಿ ತಮ್ಮ ಸಾಮರ್ಥ್ಯವನ್ನು ಮತ್ತಷ್ಟು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕಾಮಗಾರಿಗೆ ಈಗಾಗಲೇ 3 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ನಿರ್ಮಾಣಗೊಳ್ಳಲಿರುವ ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಈಜುಕೊಳವು ಹನೂರು ಪಟ್ಟಣಕ್ಕೆ ಮಾತ್ರ ಸೀಮಿತವಾಗದೆ ತಾಲೂಕಿನ ವಿವಿಧ ಗ್ರಾಮಗಳ ಕ್ರೀಡಾಪಟುಗಳಿಗೂ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದರು.ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ. ಆದರೆ ಸೂಕ್ತ ಮೂಲಸೌಕರ್ಯ ಮತ್ತು ತರಬೇತಿ ಸೌಲಭ್ಯಗಳ ಕೊರತೆಯಿಂದ ಅನೇಕ ಪ್ರತಿಭೆಗಳು ತಮ್ಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಪ್ರದರ್ಶಿಸಲು ಸಾಧ್ಯವಾಗುತ್ತಿಲ್ಲ. ಕ್ರೀಡೆ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜತೆಗೆ ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಶಿಸ್ತು, ಆತ್ಮವಿಶ್ವಾಸ, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆನಂದ್ ಕುಮಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಶಾಗ್ಯ ಬಾಬಣ್ಣ, ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಸಿಂಗಾನಲ್ಲೂರು ರಾಜಣ್ಣ, ಗುರುಸ್ವಾಮಿ, ಸಿದ್ದರಾಜು, ದೇವರಾಜು, ಇಂದುವಾಡಿ ಗೋವಿಂದ, ಕಿರಣ್ ಕುಮಾರ್, ಅಂಜುಂ ಪಾಷ, ಗೋವಿಂದ, ನಟರಾಜುಗೌಡ, ತಿರುಪತಿ, ಬಸವರಾಜು, ನಾಗಯ್ಯ, ಅಮೀನ್, ವೆಂಕಟೇಶ್ ಹಲವರು ಹಾಜರಿದ್ದರು.