ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆ ಧರಿಸಿ, ಅತ್ತರ್ ಹಚ್ಚಿ, ವಿವಿಧ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಬಕ್ರೀದ್ ಹಬ್ಬದ ಸಡಗರ. ಜಿಲ್ಲೆಯ ಮುಸ್ಲಿಂ ಬಾಂಧವರು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಅಝ್‌ಹಾ’ ಆಚರಿಸಿದರು.
ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆ ಧರಿಸಿ, ಅತ್ತರ್ ಹಚ್ಚಿ, ವಿವಿಧ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.
ಪ್ರತಿಯೊಂದು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುವುದು ವಾಡಿಕೆ. ಈ ಬಾರಿಯೂ ಇದನ್ನು ಪಾಲನೆ ಮಾಡಿದರು.
ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್, ಪಂಪ್‌ವೆಲ್‌ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್‌ಬ್ಯಾಂಕ್‌ನ ಇಬ್ರಾಹಿಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್‌ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್‌ಲೇನ್‌ನ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೆಮನ್ ಜುಮಾ ಮಸ್ಜಿದ್, ಬಂದರಿನ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್ ಹಾಗೂ ಖುತ್ಬಾ ನೆರವೇರಿತು.
ಅಗಲಿದವರಿಗೆ ಪ್ರಾರ್ಥನೆ:
ಈದ್ ನಮಾಝ್- ಖುತ್ಬಾ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡುಬಂತು.
ಮಂಗಳೂರಿನ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್-ಅಝ್ಹರಿ ಖುತ್ಬಾ ಪಾರಾಯಣಗೈದರು. ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ ಅಧ್ಯಕ್ಷ ಯೆನೆಪೊಯ ಅಬ್ದುಲ್ಲಾ ಕುಂಞಿ, ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಬಂದರ್, ಕೋಶಾಧಿಕಾರಿ ಹಾಜಿ ಎಸ್‌ಎಂ ರಶೀದ್, ಉಪಾಧ್ಯಕ್ಷ ಕೆ. ಅಶ್ರಫ್, ಈದ್ಗಾ ಮಸೀದಿಯ ಖತೀಬ್ ಪಿ.ಎಚ್ ಮುಸ್ತಫಾ ಅಝ್ಹರಿ ಮತ್ತಿತರರು ಪಾಲ್ಗೊಂಡಿದ್ದರು.ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್‌ನ ಖತೀಬ್ ಅಬ್ದುಲ್ ಅಕ್ರಂ ಬಾಖವಿ ನಮಾಝ್‌ಗೆ ನೇತೃತ್ವ ನೀಡಿದರು. ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಿ ಶುಭ ಹಾರೈಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.