ಜನಸಂಖ್ಯೆ, ನೈಸರ್ಗಿಕ ಸಂಪನ್ಮೂಲಗಳ ನಡುವೆ ಸಮತೋಲನ ಅಗತ್ಯ: ನಿಶ್ಚಲಾನಂದನಾಥ ಸ್ವಾಮೀಜಿ

KannadaprabhaNewsNetwork |  
Published : Aug 28, 2026, 01:45 AM IST
27ಎಚ್ಎಸ್ಎನ್14 :  | Kannada Prabha

ಸಾರಾಂಶ

ಪಾಶ್ಚಾತ್ಯ ದೇಶಗಳಲ್ಲಿ ಕಡಿಮೆ ಜನಸಂಖ್ಯೆ ಇರುವುದರಿಂದ ಅಲ್ಲಿನ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಸಮಾನತೆ ಮತ್ತು ಉತ್ತಮ ಕೌಟುಂಬಿಕ ವಾತಾವರಣದಲ್ಲಿ ಸಂತೋಷದ ಜೀವನ ನಡೆಸಲು ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವ ಮೂಲಕ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಸುಸ್ಥಿರ ಗುಣಮಟ್ಟದ ಜೀವನಕ್ಕೆ ಆದ್ಯತೆ ನೀಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ಕರೆ ನೀಡಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಸನ ಜಿಲ್ಲಾ ಶಾಖೆ, ಯುವ ರೆಡ್‌ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ವಿಶೇಷ ಅರಿವು ಹಾಗೂ ಆಧ್ಯಾತ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ಭಾರತದಲ್ಲಿ ಜನಸಂಖ್ಯೆ ಮತ್ತು ಲಭ್ಯವಿರುವ ಸಂಪನ್ಮೂಲಗಳ ನಡುವೆ ಸಮತೋಲನ ಸಾಧಿಸುವುದು ಅತ್ಯಂತ ಅಗತ್ಯವಾಗಿದೆ. ಪರಿಸರ, ಆಹಾರ, ನೀರು, ವಸತಿ, ಶಿಕ್ಷಣ, ಆರೋಗ್ಯ ಸೇರಿ ಮೂಲಭೂತ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೂ ಸಮರ್ಪಕವಾಗಿ ಒದಗಿಸಲು ಜನಸಂಖ್ಯೆ ನಿಯಂತ್ರಣದ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.

ಪಾಶ್ಚಾತ್ಯ ದೇಶಗಳಲ್ಲಿ ಕಡಿಮೆ ಜನಸಂಖ್ಯೆ ಇರುವುದರಿಂದ ಅಲ್ಲಿನ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಸಮಾನತೆ ಮತ್ತು ಉತ್ತಮ ಕೌಟುಂಬಿಕ ವಾತಾವರಣದಲ್ಲಿ ಸಂತೋಷದ ಜೀವನ ನಡೆಸಲು ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಹಾಗೂ ಸುಖಮಯ ಜೀವನವನ್ನು ನೀಡಬೇಕಾದರೆ ಜನಸಂಖ್ಯೆ ಮತ್ತು ಸಂಪನ್ಮೂಲಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ. ಪರಿಸರ ಸಂರಕ್ಷಣೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ನಿಶ್ಚಲಾನಂದನಾಥ ಮಹಾಸ್ವಾಮೀಜಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಮಾತನಾಡಿ, ಮಹಿಳೆಯರು ಮೊದಲು ಆರ್ಥಿಕ ಸ್ವಾವಲಂಬನೆ ಸಾಧಿಸಲು ಪ್ರಯತ್ನಿಸಬೇಕು. ಹೆಣ್ಣು ಮಕ್ಕಳು ದೇಶದ ಜನಸಂಖ್ಯೆಯ ಅರ್ಧದಷ್ಟು ಭಾಗವನ್ನು ಹೊಂದಿದ್ದು, ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಸಾಧನೆ ಮತ್ತು ಛಾಪು ಮೂಡಿಸಿದ್ದಾರೆ. ಆದರೂ ಸಮಾಜದಲ್ಲಿ ಗಂಡು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುವ ಮನೋಭಾವ ಇನ್ನೂ ಮುಂದುವರಿದಿದ್ದು, ಇದು ಹೆಣ್ಣು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ನ್ಯಾಯಾಧೀಶರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಂತಹ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿರುವುದು ಹೆಣ್ಣು ಮಕ್ಕಳಿಗೆ ಪ್ರೇರಣೆಯಾಗಬೇಕು. ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಲು ಹೆಣ್ಣು ಮಕ್ಕಳು ಆತ್ಮವಿಶ್ವಾಸದಿಂದ ಮುಂದುವರಿಯಬೇಕು ಎಂದು ಕರೆ ನೀಡಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಎಚ್‌.ಪಿ.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಧ್ಯಾಪಕಿ ರತ್ನ ವೈ.ಡಿ. ಅವರು ವಿಶ್ವ ಜನಸಂಖ್ಯಾ ದಿನಾಚರಣೆಯ ಮಹತ್ವ ಹಾಗೂ ಜನಸಂಖ್ಯೆ ಹೆಚ್ಚಳದ ಸಾಧಕ-ಬಾಧಕಗಳ ಕುರಿತು ವಿವರಿಸಿದರು.

ಡಾ. ರಂಗಲಕ್ಷ್ಮಿ ಆರ್.ಎನ್. ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗ ಪಡೆದುಕೊಂಡ ನಂತರ ಜೀವನದ ಪ್ರಮುಖ ನಿರ್ಧಾರಗಳನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಹೊಂದಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಬಾಲಕೃಷ್ಣ ಮಾತನಾಡಿ, ಜನಸಂಖ್ಯೆಯ ಹೆಚ್ಚಳದಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ಗಣ್ಯರು, ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಮಾಹಿತಿ ನೀಡಿ ಅರಿವು ಮೂಡಿಸಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೈ.ಎಸ್. ವೀರಭದ್ರಪ್ಪ, ಶಬ್ಬೀರ್ ಅಹ್ಮದ್, ಎಸ್.ಎಸ್. ಪಾಷಾ, ಡಾ. ರಂಗಲಕ್ಷ್ಮಿ ಆರ್.ಎನ್., ಶ್ರೀಮತಿ ಕೆ.ಟಿ. ಜಯಶ್ರೀ, ರೆಡ್‌ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಅಮ್ಜಾದ್ ಖಾನ್, ಬಿ.ಆರ್. ಉದಯ್ ಕುಮಾರ್, ಸುಬ್ಬಸ್ವಾಮಿ, ಗಿರಿಗೌಡ, ಭೀಮರಾಜ್, ವಿ.ಕೆ. ಅಬ್ದುಲ್ ಬಶೀರ್, ಮಮತಾ ಪಾಟೀಲ್, ಕೆ.ಆರ್. ಮಧು, ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜಕ ಪ್ರೊ. ಎಚ್.ಕೆ. ವೆಂಕಟೇಶ್ ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಭಟನೆಗೆ ಸೀಮಿತವಾದ ಹನೂರು ಬಂದ್‌
ಶೂಟೌಟ್ ಖಂಡಿಸಿ ಹನೂರಿನಲ್ಲಿ ಪ್ರತಿಭಟನೆ