ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್.

KannadaprabhaNewsNetwork |  
Published : Jun 06, 2025, 01:32 AM IST
ಹಾವೇರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲೆಯ ಕೈಗಾರಿಕೆ, ದಾಬಾ, ಹೋಟೆಲ್, ಇಟ್ಟಂಗಿ ಭಟ್ಟಿ, ಎಪಿಎಂಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಪತ್ತೆ ಹಚ್ಚಬೇಕು.

ಹಾವೇರಿ: ಬಾಲ್ಯ ವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿಷೇಧ, ಪೋಕ್ಸೊ ಕಾಯ್ದೆ ಸೇರಿದಂತೆ ಮಕ್ಕಳ ಹಕ್ಕುಗಳ ಬಗ್ಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಪ್ರಗತಿ ಪರಿಶೀಲನೆ, ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳ ಕಂಡುಬರುತ್ತಿರುವುದು ವಿಷಾದಕರ ಸಂಗತಿ. ಅಂತಹ ಪ್ರಕರಣಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಶಾಲಾ-ಕಾಲೇಜುಗಳು ಹಾಗೂ ಮಕ್ಕಳ ವಿಶೇಷ ಗ್ರಾಮಸಭೆಗಳಲ್ಲಿ ಅರಿವು ಮೂಡಿಸಬೇಕು ಎಂದು ಪದವಿ ಪೂರ್ವ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಕೈಗಾರಿಕೆ, ದಾಬಾ, ಹೋಟೆಲ್, ಇಟ್ಟಂಗಿ ಭಟ್ಟಿ, ಎಪಿಎಂಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ಬಾಲಕಾರ್ಮಿಕರು ಪತ್ತೆಯಾದರೆ ಅವರನ್ನು ರಕ್ಷಿಸಬೇಕು ಹಾಗೂ ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಕೆಲಸ ಅರಿಸಿಕೊಂಡು ಊರಿಂದ ಊರಿಗೆ ಬರುವ ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಶಾಲೆಗೆ ದಾಖಲಿಸುವ ಕೆಲಸವಾಗಬೇಕು. ರಸ್ತೆ ಕಾಮಗಾರಿ, ಕಬ್ಬು ಕಟಾವು, ಕೈಗಾರಿಕೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರ ಮಕ್ಕಳನ್ನು ಹತ್ತಿರದ ಶಾಲೆಗೆ ದಾಖಲಿಸುವ ಮೂಲಕ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ ಮಾತನಾಡಿ, 2024-25ನೇ ಸಾಲಿನಲ್ಲಿ ಜಿಲ್ಲೆಯ ಹೋಟೆಲ್, ಗ್ಯಾರೇಜು, ಬೇಕರಿ, ವೆಲ್ಡಿಂಗ್‌ಶಾಪ್, ಸ್ಟೀಟ್ಸ್ ತಯಾರಿಕಾ ಘಟಕ, ಮಂಡಕ್ಕಿ ಭಟ್ಟಿ ಹಾಗೂ ವಿವಿಧ ವಾಣಿಜ್ಯ ಅಂಗಡಿಗಳ ಮೇಲೆ ದಾಳಿ ನಡೆಸಿ, 27 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. 25 ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ಗೋಡೆಬರಹ, ಆಟೋ ಪ್ರಚಾರ, ಕರಪತ್ರ-ಭಿತ್ತಿಪತ್ರ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದರು.

ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣಾ ಸಂಗಳದ, ವಿವಿಧ ತಾಲೂಕುಗಳ ತಹಸೀಲ್ದಾರಗಳು, ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುತ್ತುರಾಜ ಮಾದರ ಉಪಸ್ಥಿತರಿದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ