ಕೆಎಸ್‌ಆರ್‌ಟಿಸಿ ಮಳಿಗೆಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧ

KannadaprabhaNewsNetwork |  
Published : May 08, 2026, 02:30 AM IST
ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳ ಮಳಿಗೆಗಳಲ್ಲಿ ಕಡ್ಡಾಯವಾಗಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲು ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಹಾವೇರಿ: ಜಿಲ್ಲೆಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳ ಮಳಿಗೆಗಳಲ್ಲಿ ಕಡ್ಡಾಯವಾಗಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲು ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಂಬಾಕು ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಅವರು, ತಂಬಾಕು ನಿಯಂತ್ರಣ ತಿದ್ದುಪಡಿ ಕಾಯ್ದೆ-2024ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದೆ. 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ದಂಡದ ಮೊತ್ತವನ್ನು ₹200 ಮೊತ್ತದ ಬದಲಾಗಿ ಒಂದು ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ಕಾಯ್ದೆಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ದಂಡದ ಸೂಚನಾ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ಸತತವಾಗಿ ಅರಿವು ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ನಿಯಮಾನುಸಾರ ಸಭೆ ನಡೆಸಬೇಕು. ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ತಂಬಾಕು ಮಾರಾಟಗಾರರಿಗೆ ನಿಯಮನುಸಾರ ಪ್ರತ್ಯೇಕ ಪರವಾನಗಿ ನೀಡಬೇಕು ಎಂದು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯಮಾನುಸಾರ ಶಾಲಾ-ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಆಯಾ ಶಾಲಾ-ಕಾಲೇಜುಗಳ ವ್ಯಾಪ್ತಿಯ ಸ್ಥಳೀಯ ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಕರು, ಎಸ್‌ಡಿಎಂಸಿ ಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಶಾಲಾ-ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ತಡೆಗೆ ಕ್ರಮಕೈಗೊಳ್ಳಬೇಕು. ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮಾಡಬೇಕು ಹಾಗೂ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡಬೇಕು. ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನದ ಮೂಲಕ ತಂಬಾಕು ಮುಕ್ತ ಗ್ರಾಮ ಘೋಷಣೆಯಾದ ಗ್ರಾಮಗಳಲ್ಲಿ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಪಾಟೀಲ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕಳೆದ - 2025-26ನೇ ಸಾಲಿನಲ್ಲಿ 29 ದಾಳಿ ನಡೆಸಿ, 316 ಪ್ರಕರಣ ದಾಖಲಿಸಲಾಗಿದೆ ಹಾಗೂ ₹30,100 ದಂಡ ಸಂಗ್ರಹಣೆ ಮಾಡಲಾಗಿದೆ. 494 ಪುರುಷ ಹಾಗೂ 58 ಮಹಿಳೆಯರು ಸೇರಿ 552 ಜನರಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ. ನಿಕೋಟಿನ್ ಗಮ್ಸ್ ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ತಂಬಾಕು ನಿಯಂತ್ರಣ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ, ಡಾ. ಚನ್ನಬಸಯ್ಯ ವಿರಕ್ತಮಠ, ಡಾ. ಸರಿತಾ, ಡಾ. ನೀಲೇಶ, ಡಾ. ಸಂತೋಷ ದಡ್ಡಿ, ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಶೋಕಮಾತಾ ಚರ್ಚಿನ ಧರ್ಮಗುರುಗಳಾಗಿ ವಂ| ಡೆನಿಸ್ ಡೆಸಾ ಅಧಿಕಾರ ಸ್ವೀಕಾರ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ನೂತನ ಧರ್ಮಗುರುಗಳಾಗಿ ವಂ| ಹೆನ್ರಿ ಮಸ್ಕರೇನ್ಹಸ್ ಅಧಿಕಾರ ಸ್ವೀಕಾರ