ತುಮಕೂರಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾದ ಬಂದ್

KannadaprabhaNewsNetwork | Published : Mar 23, 2025 1:34 AM

ಸಾರಾಂಶ

ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ, ಕೆಲ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಷ್ಟೇ ಸೀಮಿತವಾಯಿತು.

ಕನ್ನಡಪ್ರಭ ವಾರ್ತೆ ತುಮಕೂರು

ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಯಾವುದೇ ಬೆಂಬಲ ವ್ಯಕ್ತವಾಗದೆ, ಕೆಲ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಷ್ಟೇ ಸೀಮಿತವಾಯಿತು.

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಪುಂಡರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಅರುಣ್‍ ಕುಮಾರ್ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಟೌನ್‍ಹಾಲ್ ವೃತ್ತದಲ್ಲಿ ಜಮಾಯಿಸಿ ಸ್ವಲ್ಪಹೊತ್ತು ರಸ್ತೆತಡೆ ನಡೆಸಿ ಆಕ್ರೋಶ ಹೊರ ಹಾಕಿದರು.

ನಂತರ ಟೌನ್‍ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮುಖೇನ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಎಂ.ಜಿ.ಸ್ಟೇಡಿಯಂ ಕಾರ‍್ಯಕ್ರಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವ ಎಂಇಎಸ್ ಪುಂಡರನ್ನು ಈ ಕೂಡಲೇ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮಿತಿ ಮೀರಿದೆ. ಈ ಸಂಘಟನೆಯನ್ನು ಸರ್ಕಾರ ನಿಷೇಧ ಮಾಡಬೇಕು. ಇವರ ಪುಂಡಾಟಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಂಇಎಸ್‍ನವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಅವರನ್ನು ಸೋಲಿಸುವ ಮೂಲಕ ತಕ್ಕಪಾಠ ಕಲಿಸಬೇಕು ಎಂದು ಹೇಳಿದರು.

ಬಿಗಿ ಪೊಲೀಸ್ ಬಂದೋಬಸ್ತ್:

ಕನ್ನಡ ಪರ ಸಂಘಟನೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಮಾತ್ರ ಅನುಮತಿ ನೀಡಲಾಗಿದೆ. ಹಾಗಾಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

ಕನ್ನಡ ಪರ ಸಂಘಟನೆಗಳು ಕೇವಲ ಪ್ರತಿಭಟನೆ ಮಾತ್ರ ನಡೆಸಿ, ಮನವಿ ಸಲ್ಲಿಸಬಹುದಾಗಿದೆ. ಬೈಕ್ ರ‍್ಯಾಲಿ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಅವಕಾಶ ನೀಡಿಲ್ಲ. ಶಾಂತಿಯುತವಾಗಿ ಪ್ರತಿಭಟನೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.

ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಎಸ್ಪಿ ಅಶೋಕ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು

Share this article