ಬಾಲ ಕಾರ್ಮಿಕರ ನೇಮಕಾತಿ ಕಂಡು ಬಂದ್ರೆ ಕ್ರಮ

KannadaprabhaNewsNetwork |  
Published : Jun 04, 2025, 02:23 AM ISTUpdated : Jun 04, 2025, 02:24 AM IST
ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಹೊರ ತಂದಿರುವ 2023-24 ನೇ ಸಾಲಿನ ಜಿಲ್ಲಾ ಅಂಕಿ-ಅಂಶಗಳ ನೋಟ ಮತ್ತು ಸಾಮಾಜಿಕ ಮತ್ತು ಆರ್ಥಿಕ ಅವಲೋಕನ ಪುಸ್ತಕವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಸಭೆಯಲ್ಲಿ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ನಿಯಮಾನುಸಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷೆ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.

ಚಿಕ್ಕಮಗಳೂರು: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ನಿಯಮಾನುಸಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷೆ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕರ ಯೋಜನಾ ಸೊಸೈಟಿಯಿಂದ ಜಿಲ್ಲಾದ್ಯಂತ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಸಾಲಿನ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರು ಕೆಲಸ ಮಾಡುವುದು ಕಂಡು ಬಂದಲ್ಲಿ ನೇಮಕ ಮಾಡಿಕೊಳ್ಳುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಅಂಗಡಿ, ಗ್ಯಾರೇಜ್, ಪ್ಲಾಂಟೇಷನ್, ಕೈಗಾರಿಕೆ, ಹೋಟೆಲ್ ಮತ್ತಿತರ ಪ್ರದೇಶಗಳಲ್ಲಿ ಅನಿರೀಕ್ಷಿತ ದಾಳಿ ಮಾಡಿ ಈ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಬೇಕು. ಪತ್ತೆಯಾದ ಬಾಲ ಕಾರ್ಮಿಕರನ್ನು ಪುನಃ ವಿದ್ಯಾಭ್ಯಾಸಕ್ಕೆ ಒಳಪಡುವ ರೀತಿಯಲ್ಲಿ ಸಂರಕ್ಷಣೆ ಮಾಡಬೇಕು ಎಂದು ಸೂಚಿಸಿದರು.

ಪ್ರತಿ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಂಡು ಬರುವ ಬಾಲ ಕಾರ್ಮಿಕರಿಗೆ ಪುನರ್ವಸತಿ ಹಾಗೂ ಸರ್ಕಾರದ ಸೌಲಭ್ಯ ಕಲ್ಪಿಸಿ ಶಾಲೆ ಬಿಟ್ಟ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಹಾಜರಾತಿ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ, ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೇರಣೆಯಾಗುವಂತೆ ಅರಿವು ಮೂಡಿಸುವ ಹಲವಾರು ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಇದನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ಎಸ್‌ಇಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಹನುಮಂತಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹಲವು ಮಕ್ಕಳು ಕಾಣೆಯಾಗಿರುವ ಬಗ್ಗೆ ತುರ್ತಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ವಿದ್ಯಾರ್ಥಿಗಳು ಹಾಗೂ ವಲಸೆ ಕಾರ್ಮಿಕರನ್ನು ಗುರುತಿಸಿ, ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಲು ಯೋಜನೆಗಳನ್ನು ರೂಪಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್ ಹಾಗೂ ಸುಭಾಷ್‌ ಆಲದಕಟ್ಟಿ, ಉಪ ವಿಭಾಗಾಧಿಕಾರಿ ದೇವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!