ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಬೆಂಗಳೂರು ಚಲೋ

KannadaprabhaNewsNetwork |  
Published : Aug 12, 2026, 02:15 AM IST
10ಎಚ್ಎಸ್ಎನ್16 :  | Kannada Prabha

ಸಾರಾಂಶ

ಕಾರ್ಮಿಕ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಸರ್ಕಾರ ಮೇ ೨೨ರಂದು ಕನಿಷ್ಠ ವೇತನಕ್ಕೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿತ್ತು. ಆದರೆ ಖಾಸಗಿ ಮಾಲೀಕರ ಒತ್ತಡಕ್ಕೆ ಮಣಿದು ಅದನ್ನು ಮೌಖಿಕವಾಗಿ ತಡೆಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಕೂಡಲೇ ಅಧಿಸೂಚನೆಯನ್ನು ಜಾರಿಗೊಳಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಕಾರ್ಮಿಕರಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನದ ಅಧಿಸೂಚನೆಯನ್ನು ಕೂಡಲೇ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು.

ನಗರದಲ್ಲಿ ಮಹಾವೀರ ವೃತ್ತದ ಬಳಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಗೂ ಡಿಎಚ್‌ಎಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ಕಳೆದ ೧೦ರಿಂದ ೧೫ ವರ್ಷಗಳಲ್ಲಿ ದೇಶದ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ಸಂಪತ್ತು ಹಲವು ಪಟ್ಟು ಹೆಚ್ಚಾಗಿದೆ. ಆದರೆ ಶ್ರಮಿಕ ವರ್ಗದ ಆದಾಯ ಕುಸಿದಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕರು ಜೀವನ ನಿರ್ವಹಿಸಲು ಪರದಾಡುವಂತಾಗಿದೆ. ಕಾರ್ಮಿಕ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಸರ್ಕಾರ ಮೇ ೨೨ರಂದು ಕನಿಷ್ಠ ವೇತನಕ್ಕೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿತ್ತು. ಆದರೆ ಖಾಸಗಿ ಮಾಲೀಕರ ಒತ್ತಡಕ್ಕೆ ಮಣಿದು ಅದನ್ನು ಮೌಖಿಕವಾಗಿ ತಡೆಹಿಡಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಕೂಡಲೇ ಅಧಿಸೂಚನೆಯನ್ನು ಜಾರಿಗೊಳಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಗ್ರಾಮ ಪಂಚಾಯಿತಿ ನೌಕರರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗುತ್ತಿಗೆ ಕಾರ್ಮಿಕರಿಗೆ ಹಲವು ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆಯ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ. ಸರ್ಕಾರ ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಹೋರಾಟದ ಮುಂದಿನ ಹಂತಗಳು;

ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಪ್ರತಿಯೊಬ್ಬ ಕಾರ್ಮಿಕರೂ ಕಾರ್ಮಿಕ ಇಲಾಖೆಗೆ ಸಾಮೂಹಿಕವಾಗಿ ‘ಕ್ಲೈಮ್ ಅರ್ಜಿ’ ಸಲ್ಲಿಸುವ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ.

ಆ.೧೮ರಂದು ಗ್ರಾಮ ಪಂಚಾಯಿತಿ ನೌಕರರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಪಂಚಾಯಿತಿಗಳಿಗೆ ಬೃಹತ್ ಮುತ್ತಿಗೆ ಹಾಕಲಾಗುವುದು. ಸೆಪ್ಟಂಬರ್‌ ೮ರಂದು ‘ಬೆಂಗಳೂರು ಚಲೋ’ ಹಮ್ಮಿಕೊಂಡು ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಮಿಕರು ಬೆಂಗಳೂರಿಗೆ ಆಗಮಿಸಿ ಅಹೋರಾತ್ರಿ ಧರಣಿ ಹಾಗೂ ರಸ್ತೆ ತಡೆ ಚಳವಳಿ ನಡೆಸಲಿದ್ದಾರೆ. ಸರ್ಕಾರ ಕೂಡಲೇ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದರು. ದೇಶದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಜಿಡಿಪಿ ಹೆಚ್ಚಳದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿರುವ ಅಂಕಿಅಂಶಗಳ ವಿಶ್ವಾಸಾರ್ಹತೆಯ ಬಗ್ಗೆ ಹಲವು ಸಂಸ್ಥೆಗಳು ಪ್ರಶ್ನೆಗಳನ್ನು ಎತ್ತಿವೆ. ಉದ್ಯೋಗಾವಕಾಶಗಳ ಕೊರತೆಯಿಂದ ವಿವಿಧ ಕ್ಷೇತ್ರಗಳ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅಗತ್ಯ ಪ್ರಮಾಣದಲ್ಲಿ ಅನುದಾನ ನೀಡದ ಸರ್ಕಾರಗಳು, ಜಿಎಸ್‌ಟಿ ಸೇರಿದಂತೆ ವಿವಿಧ ತೆರಿಗೆಗಳ ಮೂಲಕ ಶ್ರಮಿಕ ವರ್ಗದ ಮೇಲೆ ಹೆಚ್ಚಿನ ಹೊರೆ ಹಾಕುತ್ತಿವೆ ಎಂದು ಧರ್ಮೇಶ್ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರಿಗೆ ಕನಿಷ್ಠ ವೇತನ, ಬಾಕಿ ವೇತನ ಪಾವತಿ, ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.ಜನಾಕ್ರೋಶ ಸಭೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಖಜಾಂಚಿ ಅರವಿಂದ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್‌, ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ, ಮುಖಂಡರಾದ ಹೊನ್ನೇಗೌಡ, ಚಂದ್ರೇಗೌಡ, ನಂದೀಶ್, ಕುಮಾರಸ್ವಾಮಿ, ಚಂದ್ರಹಾಸ್, ಬಿಟಿಯೂಟಿ ನೌಕರರ ಸಂಘಟನೆಯ ಉಷಾ ಸೇರಿದಂತೆ ರೈತ ಮತ್ತು ಕಾರ್ಮಿಕ ಸಂಘಟನೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮುಖಂಡರು ಮತ್ತು ನೂರಾರು ಶ್ರಮಿಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೈಕ್ಷಣಿಕ ಶ್ರೇಷ್ಠತೆಗೆ ಹೊಸ ಅಧ್ಯಾಯ ಬರೆದ ಎಕ್ಸಲೆಂಟ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತಸಂಘ ಆಗ್ರಹ