ಧಾರವಾಡ:
ಜಿಪಂ ಸಭಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ವಿಶೇಷವಾಗಿ ಕೃಷಿ, ಸಣ್ಣ ಉದ್ಯಮ, ಸ್ವ ಉದ್ಯೋಗ, ಮಹಿಳಾ ಸ್ವ-ಸಹಾಯ ಗುಂಪುಗಳು ಹಾಗೂ ಯುವಕರಿಗೆ ನೀಡಲಾಗುವ ಸಾಲ ಸೌಲಭ್ಯಗಳು ಸರಿಯಾದ ಸಮಯದಲ್ಲಿ ಲಭ್ಯವಾಗುವಂತೆ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಬ್ಯಾಂಕ್‌ಗಳ ಸಾಲ ವಿತರಣೆ ಮತ್ತು ಠೇವಣಿ ಸಂಗ್ರಹಣೆಯ ಪ್ರಗತಿ ಪರಿಶೀಲಿಸಿ, ಸಾಲ, ಠೇವಣಿ ಅನುಪಾತವನ್ನು ಮತ್ತಷ್ಟು ಸುಧಾರಿಸಲು ಎಲ್ಲ ಬ್ಯಾಂಕ್‌ಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ತಿಳಿಸಿದರು.ಡಿಜಿಟಲ್ ಬಗ್ಗೆ ಅರಿವು ಮೂಡಿಸಿ:ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ನಗದು ರಹಿತ ವಹಿವಾಟು ಉತ್ತೇಜಿಸುವ ಮೂಲಕ ಆರ್ಥಿಕ ಶಿಸ್ತನ್ನು ಬೆಳೆಸಿಕೊಳ್ಳಬೇಕು ಮತ್ತು ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಗ್ರಾಹಕರಿಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಸ್ವ-ಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಸಾಲ ಮಂಜೂರಾತಿಯಲ್ಲಿ ಅನಗತ್ಯ ವಿಳಂಬ ಆಗಬಾರದು ಮತ್ತು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸಾಲ ಸೌಲಭ್ಯ ದೊರೆಯುವಂತೆ ಕ್ರಮಕೈಗೊಳ್ಳಬೇಕು. ಯುವಕರಲ್ಲಿ ಉದ್ಯಮಶೀಲತೆ ಬೆಳೆಸಲು ಬ್ಯಾಂಕ್‌ಗಳು ಮಾರ್ಗದರ್ಶನ ಮತ್ತು ಹಣಕಾಸು ನೆರವು ಒದಗಿಸಬೇಕೆಂದು ಭುವನೇಶ ಪಾಟೀಲ ತಿಳಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಗ್ರಾಹಕರಿಗೆ ಉತ್ತಮವಾಗಿ ಸ್ಪಂದಿಸಬೇಕು. ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಲೀನಗೊಂಡ ಮೇಲೆ ರೈತರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ರೈತರ ಸಮಸ್ಯೆ ಪರಿಹರಿಸಲು ಕ್ರಮವಹಿಸಬೇಕು ಎಂದರು.
ಲೀಡ್ ಬ್ಯಾಂಕ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ಬಸವರಾಜ ಗಡಾದ ಸ್ವಾಗತಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಅರುಣಕುಮಾರ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಯೂರ್ ಕಾಂಬಳೆ, ಬ್ಯಾಂಕ್ ಆಫ್ ಬರೋಡಾ ಉಪ-ಪ್ರಾದೇಶಿಕ ವ್ಯವಸ್ಥಾಪಕ ಅಮರೇಶ ಗೌಡ, ಚಂದ್ರಶೇಖರ ಪಾಟೀಲ, ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.