ರವಿ ಹಂಜ್‌ ಬಂಧನಕ್ಕೆ ಬಸವಾಭಿಮಾನಿಗಳ ಆಗ್ರಹ

KannadaprabhaNewsNetwork |  
Published : Nov 21, 2026, 03:00 AM IST
ರವಿ ಹಂಜ ಬಂಧಿಸುವಂತೆ ಆಗ್ರಹಿಸಿ ವಿವಿದ ಲಿಂಗಾಯತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್‌ ಹಾಗೂ ಅದನ್ನು ಪ್ರಸಾರ ಮಾಡಿದ ಖಾಸಗಿ ವಾಹಿನಿಯ ಸಂಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆಯಲು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಬೇಕು ಎಂದು ಆಗ್ರಹಿಸಿ ಬಸವಾಭಿಮಾನಿಗಳು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್‌ ಹಾಗೂ ಅದನ್ನು ಪ್ರಸಾರ ಮಾಡಿದ ಖಾಸಗಿ ವಾಹಿನಿಯ ಸಂಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆಯಲು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಬೇಕು ಎಂದು ಆಗ್ರಹಿಸಿ ಬಸವಾಭಿಮಾನಿಗಳು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಾಗತಿಕ ಲಿಂಗಾಯತ ಮಹಾಸಭೆ ನೇತೃತ್ವದಲ್ಲಿ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಮಹಾಸ್ವಾಮೀಜಿ ಹಾಗೂ ಅಥಣಿ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಲೇಖಕ ರವಿ ಹಂಜ್‌ ಹಾಗೂ ಸಂದರ್ಶನ ಪ್ರಸಾರ ಮಾಡಿದ ವಾಹಿನಿಯ ಸಂಪಾದಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ 2024ರ ಜನವರಿಯಲ್ಲಿ ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾಡಿನ ಹೆಮ್ಮೆಯ ಸಂಗತಿಯಾಗಿದೆ. ಇಂತಹ ಮಹಾನ್ ದಾರ್ಶನಿಕರ ಕುರಿತು ಯೂಟ್ಯೂಬ್ ವಾಹಿನಿ ಸಂದರ್ಶನದಲ್ಲಿ ಅನಿವಾಸಿ ಭಾರತೀಯ ರವಿ ಹಂಜ್‌ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಿದ್ದಾರೆ. ಬಸವಣ್ಣನವರನ್ನು ಕಳ್ಳ, ಸುಳ್ಳ, ಕೊಲೆಗಾರ ಎಂದು ಕರೆದಿರುವುದಲ್ಲದೆ, ಲಿಂಗಾಯತ ಸಮುದಾಯವನ್ನೂ ಅವಹೇಳನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ವೇಳೆ ಮಾತನಾಡಿದ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಬಸವಣ್ಣನವರ ವ್ಯಕ್ತಿತ್ವ ಮತ್ತು ತತ್ವಾದರ್ಶಗಳಿಗೆ ಧಕ್ಕೆ ತರುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಅಥಣಿ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಮಾತನಾಡಿ, ಮಹಾನ್ ದಾರ್ಶನಿಕರನ್ನು ನಿಂದಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಗಂಭೀರ ಕೃತ್ಯ ಎಸಗಲಾಗಿದೆ. ಲೇಖಕ ರವಿ ಹಂಜ್‌ ವಿದೇಶದ ಯಾವುದೇ ಮೂಲೆಯಲ್ಲಿದ್ದರೂ ಬಂಧಿಸಿ ರಾಜ್ಯಕ್ಕೆ ಕರೆತರಬೇಕು. ಆರೋಪಿಯನ್ನು ಬಿಡುಗಡೆ ಮಾಡಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದರ ಜತೆಗೆ ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ರವಿ ಹಂಜ್‌ ಹಾಗೂ ಖಾಸಗಿ ವಾಹಿನಿಯ ಸಂಪಾದಕರ ವಿರುದ್ಧ ಈಗಾಗಲೇ ಬೆಳಗಾವಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಕೇವಲ ಪ್ರಕರಣ ದಾಖಲಿಸುವುದರಿಂದ ಪ್ರಯೋಜನವಿಲ್ಲ. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿರುವ ಅನುಮಾನವಿದೆ. ಲೇಖಕ ಹಾಗೂ ವಾಹಿನಿಯ ಸಂಪಾದಕರ ಪಾತ್ರ ಸೇರಿದಂತೆ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರ ಗೌರವ ಮತ್ತು ತತ್ವಾದರ್ಶಗಳಿಗೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸುವುದಿಲ್ಲ. ಸರ್ಕಾರ ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಅಶೋಕ ಮಳಗಲಿ, ಉಪಾಧ್ಯಕ್ಷ ಮುರುಗೇಶ ಶಿವಪೂಜಿ, ರಾಷ್ಟ್ರೀಯ ಬಸವದಳದ ಅಶೋಕ ಬೆಂಡಿಗೇರಿ, ಲಿಂಗಾಯತ ಸಂಘಟನೆಯ ಈರಣ್ಣ ದೇಯಣ್ಣವರ, ಶಂಕರ ಗುಡುಸ, ರತ್ನಾ ಬೆನಸಿನಮರಡಿ, ಮುರಿಗೆಪ್ಪ ಬಾಳಿ, ಶಿವಾನಂದ ಮೆಟ್ಯಾಳ, ಸುರೇಶ ನರಗುಂದ, ಎಸ್‌.ಜಿ.ಸಿದ್ನಾಳ ಸೇರಿದಂತೆ ಬಸವಪರ ಸಂಘಟನೆಗಳ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

----------

ಕೋಟ್‌

ಬಸವಣ್ಣನವರ ವಿಚಾರಧಾರೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗೌರವಿಸುತ್ತಾರೆ. ಇಂತಹ ಮಹಾನ್ ದಾರ್ಶನಿಕರ ಕುರಿತು ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿರುವುದು ಖಂಡನೀಯ. ವಿವಾದಿತ ''''''''''''''''''''''''''''''''''''''''''''''''''''''''''''''''ಬಸವ ಮಂಟಪ'''''''''''''''''''''''''''''''''''''''''''''''''''''''''''''''' ಪುಸ್ತಕವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ. ಆದರೆ, ಪುಸ್ತಕದ ಮಾರಾಟ ಮತ್ತು ಪ್ರಸಾರ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ