ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯಗಳಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಆದರೆ, ಸೂಕ್ತ ತರಬೇತಿ, ಮಾರ್ಗದರ್ಶನ ಹಾಗೂ ಆರ್ಥಿಕ ನೆರವಿನ ಕೊರತೆಯಿಂದ ಅನೇಕರು ತಮ್ಮ ಪ್ರತಿಭೆಗೆ ತಕ್ಕ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಬಸವಧಾಮ ಸೆಂಟರ್ ಆಫ್ ಎಕ್ಸಲೆನ್ಸ್ ಸಂಸ್ಥೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಇಲ್ಲಿ ಯಾವುದೇ ವರ್ಗ, ಮತ, ಲಿಂಗ ಭೇದವಿಲ್ಲದೆ ಗುಣಮಟ್ಟದ ತರಬೇತಿ ನೀಡುವುದರ ಜತೆಗೆ ನಾಯಕತ್ವ ಗುಣಗಳನ್ನು ಬೆಳೆಸಲಾಗುವುದು ಎಂದರು.
ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ₹1ಕ್ಕೆ ತರಬೇತಿ:ಸಂಸ್ಥೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ವಿದ್ಯಾರ್ಥಿಗಳು ಕೇವಲ ₹1 ಪಾವತಿಸಿ ತರಬೇತಿ ಪಡೆಯಬಹುದು. ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ನ್ಯಾಯಾಂಗ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ಶಿಕ್ಷಕರಿಂದ 18 ತಿಂಗಳ ಸಮಗ್ರ ತರಬೇತಿ ನೀಡಲಾಗುವುದು. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಸಿದ್ಧತೆ ಮಾಡಲಾಗುವುದು. ದಿವ್ಯಾಂಗರು, ಅನಾಥರು ಹಾಗೂ ತೃತೀಯ ಲಿಂಗಿಗಳಿಗೂ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗುವುದು ಎಂದರು.
ರಾಜ್ಯದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಲಕ್ಷಾಂತರ ರು. ವೆಚ್ಚ ಮಾಡಿ ದೆಹಲಿ, ಚೆನ್ನೈ, ಅಹಮದಾಬಾದ್ ಸೇರಿದಂತೆ ದೂರದ ನಗರಗಳಿಗೆ ತೆರಳುತ್ತಿದ್ದಾರೆ. ಅಂತಹ ನಗರಗಳಲ್ಲಿರುವ ಗುಣಮಟ್ಟದ ತರಬೇತಿ ಸೌಲಭ್ಯವನ್ನು ರಾಜ್ಯದಲ್ಲಿಯೇ ಕಲ್ಪಿಸುವ ಉದ್ದೇಶವಿದೆ. ಸುಮಾರು ₹150 ಕೋಟಿ ವೆಚ್ಚದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಹಾಗೂ ಒಂದು ಸಾವಿರ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಬಸವಧಾಮ ಸೆಂಟರ್ ಆಫ್ ಎಕ್ಸಲೆನ್ಸ್ ಸಂಸ್ಥೆಯ ಕಾರ್ಯದರ್ಶಿ ಜಗದೀಶ ನಾಯಿಕ, ರಾಚನಗೌಡ ಮುದ್ನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ನಗರದ ಗಾಂಧಿ ಭವನದಲ್ಲಿ ವಿವಿಧ ಸಮಾಜಗಳ ಮುಖಂಡರ ಸಭೆ ನಡೆಸಿದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರು, ಬಸವಧಾಮ ಸಂಸ್ಥೆ ಸ್ಥಾಪನೆಯ ಉದ್ದೇಶ ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ.ಪ್ರಭಾಕರ ಕೋರೆ, ಆರ್‌ಎಸ್‌ಎಸ್ ಪ್ರಮುಖ ರಾಘವೇಂದ್ರ ಕಾಗವಾಡ, ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಸ್ವಪ್ನಿಲ್ ಶಹ, ಸಂಜೀವ ಕತ್ತಿಶೆಟ್ಟಿ, ಜಯಂತ ಹುಂಬರವಾಡಿ, ವಿನೋದ ದೊಡ್ಡಣ್ಣವರ, ಪಂಚಾಕ್ಷರಿ ಚೊನ್ನದ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.