ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಶೌಚಾಲಯ ವ್ಯವಸ್ಥೆ ಕಲ್ಪಿಸುವುದರ ಜತೆಗೆ, ಶೌಚಾಲಯ ಬಳಕೆಯ ಹೆಸರಿನಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಡಿವೈಎಫ್‌ಐ ಜಿಲ್ಲಾ ಸಮಿತಿ ನೇತೃತ್ವದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಬಸ್ ನಿಲ್ದಾಣದಲ್ಲಿ ಶೌಚಾಲಯಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದು ಪ್ರಯಾಣಿಕರಿಗೆ ತೊಂದರೆಯಾಗಿದೆ. ಮಹಿಳೆಯರು ಅನಿವಾರ್ಯವಾಗಿ ಶೌಚಾಲಯ ಬಳಸುವ ಸಂದರ್ಭದಲ್ಲಿ ಹಣ ನೀಡಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಶೌಚಾಲಯಗಳನ್ನು ಸ್ವಚ್ಛವಾಗಿಡುವುದರ ಜತೆಗೆ ಮಹಿಳೆಯರಿಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ನಿಯಮಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ, ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ, ಮುಖಂಡರಾದ ಶಂಭುಲಿಂಗ ಸವದತ್ತಿ, ಪರಶುರಾಮ ಎಸ್., ಕಾಂತೇಶ ಹಳ್ಳೇರ, ಲೋಕೇಶ ಕೆಂಚಣ್ಣನವರ, ಶರಣಪ್ಪ ಮಲ್ಲಕ್ಕನವರ ಸೇರಿದಂತೆ ವಿದ್ಯಾರ್ಥಿ-ಯುವಜನರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.