ಸೋಮರಡ್ಡಿ ಅಳವಂಡಿ
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ಪ್ರಯತ್ನ ಆರಂಭಿಸಿದ್ದು, ಅದರಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್‌ನಲ್ಲಿ ಹಲವು ಆಕಾಂಕ್ಷಿಗಳು: ಕಾಂಗ್ರೆಸ್ ಪಾಳಯದಲ್ಲಿ ಕೇಶವರಡ್ಡಿ ಮಾದಿನೂರು ಹೆಸರು ಮುಂಚೂಣಿಯಲ್ಲಿದೆ ಎಂಬ ಚರ್ಚೆ ನಡೆಯುತ್ತಿದೆ. ಇವರನ್ನೇ ಕಣಕ್ಕಿಳಿಸುವ ಬಗ್ಗೆ ಪಕ್ಷದಲ್ಲಿ ತೀರ್ಮಾನವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಅಧಿಕೃತವಾಗಿ ಪ್ರಕಟವಾಗಿಲ್ಲ. ವೆಂಕನಗೌಡ ಹಿರೇಗೌಡ್ರ ಹಾಗೂ ಗಾಳೆಪ್ಪ ಪೂಜಾರಿ ಕೂಡ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದರ ನಡುವೆ ಸೋಮಶೇಖರ ಹಿಟ್ನಾಳ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ, ಕಾಂಗ್ರೆಸ್‌ನಲ್ಲಿ ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲವೂ ಇದೆ.ಬಿಜೆಪಿ–ಜೆಡಿಎಸ್ ನಡುವೆ ಪೈಪೋಟಿ: ಬಿಜೆಪಿ ಹಾಗೂ ಜೆಡಿಎಸ್ ಈ ಕ್ಷೇತ್ರವನ್ನು ತಮ್ಮ ಪಾಲಿಗೆ ಪಡೆಯಲು ಪ್ರಯತ್ನಿಸುತ್ತಿವೆ. ಬಿಜೆಪಿಯಿಂದ ಅಜಯಕುಮಾರ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಅವರ ಸಹೋದರ ಮಹಾಂತೇಶ ಪಾಟೀಲ್ ಅವರೂ ಸ್ಪರ್ಧಿಸುವ ಸಾಧ್ಯತೆ ಕುರಿತು ಚರ್ಚೆಯಾಗುತ್ತಿದೆ. ಇದರ ಜತೆಗೆ ವೀರೇಶ ಸಜ್ಜನ ಅವರ ಹೆಸರೂ ಪ್ರಸ್ತಾಪದಲ್ಲಿದೆ.
ಮೀಸಲಾತಿ ಬದಲಾವಣೆಯ ಚರ್ಚೆ: ಜಿಪಂ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಮಧ್ಯೆ ಹಿರೇಸಿಂದೋಗಿ ಕ್ಷೇತ್ರವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿದೆ. ಮೀಸಲಾತಿಯಲ್ಲಿ ಬದಲಾವಣೆಯಾದರೆ ಈಗಾಗಲೇ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿರುವ ಆಕಾಂಕ್ಷಿಗಳ ಲೆಕ್ಕಾಚಾರ ಬದಲಾಗುವ ಸಾಧ್ಯತೆಯಿದೆ.