ಕನ್ನಡಪ್ರಭ ವಾರ್ತೆ ಹಾಸನ
ಕೃಷಿ ಯಂತ್ರೋಪಕರಣಗಳನ್ನು ನಿಗದಿತ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಬೇಕು. ಏಜೆಸ್ಸಿಗಳು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ನಿಗಾ ವಹಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ೨೦೨೪-೨೫ ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಹಂಚಿಕೆ ಮಾಡಿರುವ ಅನುದಾನಕ್ಕೆ ಅನುಗುಣವಾಗಿ ಅನುಷ್ಟಾನ ಮಾಡುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಉಳಿದ ಅನುದಾನ ವೆಚ್ಚ ಮಾಡುವಂತೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಹಂಚಿಕೆಯಾಗಿರುವ ಹಣವನ್ನು ಆ ಸಮುದಾಯದ ಜನರಿಗೆ ವೆಚ್ಚ ಮಾಡಬೇಕು. ಪರಿಶಿಷ್ಟ ಪಂಗಡಗಳ ಜನರಿಲ್ಲ ಎಂದು ಇತರೆ ಸಮುದಾಯಕ್ಕೆ ವೆಚ್ಚ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಣ ವರ್ಗಾವಣೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಗುಂಡಿ ಮುಚ್ಚಲು 1 ವಾರ ಗಡುವು:ಜಿಲ್ಲೆಯ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವನ್ನು ಒಂದು ವಾರದಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕೆಲಸ ಪೂರ್ಣಗೊಳಿಸಿರುವ ಬಗ್ಗೆ ವರದಿ ನೀಡುವಂತೆ ತಿಳಿಸಿದರು. ಹಾಸನ ನಗರದಲ್ಲಿ ೧೨೪ ಕೋಟಿ ರು. ವೆಚ್ಚದಲ್ಲಿ ವಿಹಾರ ಧಾಮ ನಿರ್ಮಿಸಲಾಗಿದೆ, ಆದರೆ ಅದು ಸಾರ್ವಜನಿಕರಿಗೆ ಬಳಕೆ ಆಗುತ್ತಿಲ್ಲ, ಈ ನಿಟ್ಟಿನಲ್ಲಿ ಅದಕ್ಕೆ ನೀರು ತುಂಬಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ರೇಷ್ಮೆ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಮನೆಗಳಲ್ಲಿ ರೇಷ್ಮೆ ಸಾಕಾಣಿಕೆ ಮಾಡುತ್ತಿದ್ದಾರೆಯೇ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ಟಿ.ಎಸ್.ಪಿ.ಯೋಜನೆಯಡಿ ವಿದ್ಯುದ್ದೀಕರಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಗುರುತಿಸಿ ಎಂದು ಕೆ.ಪಿ.ಟಿ.ಸಿ.ಎಲ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಕುಂದುಕೊರತೆಗಳನ್ನು ಪರಿಹರಿಸಲು ನಿಯತ್ತಾಗಿ ಕೆಲಸ ಮಾಡುವಂತೆ ಸೂಚಿಸಿದ ಅವರು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಗಮನಹರಿಸಬೇಕು ಎಂದು ತಿಳಿಸಿದರು.ಇತ್ತೀಚೆಗೆ ಆಲೂರು ತಾಲೂಕಿನ ಗಂಜಿಗೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಯಲ್ಲಿ ಕಂಡುಬಂದ ದೃಶ್ಯಗಳ ಕುರಿತು ಮಾತನಾಡಿದ ಅವರು, ಸ್ಥಳೀಯವಾಗಿ ಲಭ್ಯವಿರುವವರನ್ನು ಅಡುಗೆ ಕೆಲಸಕ್ಕೆ ನೇಮಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆರೆಗಳ ಸರ್ವೆ ಆಗುತ್ತಿದೆ. ಅವುಗಳ ಸಂರಕ್ಷಣೆ ಮಾಡಲು ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಿಗೆ ತಿಳಿಸಿದರು. ೪೩ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಗುಡ್ಡೇನಹಳ್ಳಿಯಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳುವಂತೆ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೂದ್ ಫೀರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.