ಕನ್ನಡಪ್ರಭ ವಾರ್ತೆ ಮಂಡ್ಯ
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲಾಖೆಗಳು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸದೇ ಸಣ್ಣ ಪುಟ್ಟ ಕಾರಣಗಳಿಂದ ಮಳೆ ಅಥವಾ ಬಿರುಗಾಳಿಯಿಂದ ಪ್ರಾಣ ಹಾನಿಯಾದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯ ಮಳೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆ ಹೆಚ್ಚಿನ ಗಾಳಿಯೂ ಸಂಭವಿಸಲಿದ್ದು, ಕೂಡಲೇ ಎಲ್ಲಾ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ಕಾರ್ಯನಿರ್ವಹಿಸಿ ಮರದ ದುರ್ಬಲ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಹೇಳಿದರು.ಮಳೆ ಬಂದ ಸಂದರ್ಭದಲ್ಲಿ ಮರಗಳು, ವಿದ್ಯುತ್ ಕಂಬಗಳು ಗಾಳಿಯಿಂದ ಬಿದ್ದು ಹೋದಲ್ಲಿ ಅವುಗಳನ್ನು ತಕ್ಷಣ ತೆರವುಗೊಳಿಸಲು ಇಲಾಖೆ ಸಜ್ಜಾಗಿರಬೇಕು. ಮಳೆಯಾಗುವಾಗ ಕ್ಷಿಪ್ರವಾಗಿ ಕೆಲಸ ನಿರ್ವಹಿಸಲು ತಂಡಗಳನ್ನು ರಚಿಸಿ. ಸಾರ್ವಜನಿಕರಿಂದ ದೂರು ಬಾರದಂತೆ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಒಳಚರಂಡಿಗಳ ಕಸ ಹಾಗೂ ಇನ್ನಿತರೆ ವಸ್ತುಗಳು ಸೇರಿಕೊಂಡು ಮಳೆ ನೀರು ಹರಿಯುವಿಕೆಗೆ ತೊಂದರೆಯಾಗುತ್ತದೆ. ಒಳಚರಂಡಿಯಲ್ಲಿರುವ ಕಸವನ್ನು ತೆರವುಗೊಳಿಸಬೇಕು. ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮರಗಳ ಕೆಳಗಡೆ ವಾಹನಗಳ ನಿಲುಗಡೆ ಮಾಡದಂತೆ ಹಾಗೂ ಇನ್ನಿತರೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಳೆ ನೀರು ನಿಂತಲ್ಲಿ ತೆರವುಗೊಳಿಸಲು ತಂಡಗಳನ್ನು ರಚಿಸಿ ದಿನದ 24 ಗಂಟೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಪಾಂಡವಪುರ ಉಪವಿಭಾಗಾಧಿಕಾರಿ ಮಾರುತಿ, ಚೆಸ್ಕಾಂ ಅಧೀಕ್ಷಕ ಅಭಿಯಂತರ ಸೋಮಶೇಖರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಸೇರಿ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.