ಕುಡಿಯುವ ನೀರಿಗೆ ಕೊರತೆ ಆಗದಂತೆ ಎಚ್ಚರ ವಹಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

KannadaprabhaNewsNetwork | Published : Mar 7, 2024 1:47 AM

ಸಾರಾಂಶ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಹಾಸನದಲ್ಲಿ ಸಭೆ ನಡೆಸಿ ಮಾತನಾಡಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅಧಿಕಾರಿಗಳಿಗೆ ಸೂಚನೆ । ಶಿಸ್ತು ಕ್ರಮ ಎಚ್ಚರಿಕೆಕನ್ನಡಪ್ರಭ ವಾರ್ತೆ ಹಾಸನ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆ ಮತ್ತು ಉಪ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಕುಡಿಯುವ ನೀರು, ಬರನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ ವಿಷಯಗಳ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಮಾತನಾಡಿ, ಅಧಿಕಾರಿಗಳು ಕುಡಿಯುವ ನೀರಿನ ಪೂರೈಕೆ ಯಾವುದೇ ವಿಳಂಬ ಮಾಡದೇ ಕ್ರಮವಹಿಸಲು ಸೂಚಿಸಿದರು.

ಕುಡಿಯುವ ನೀರಿಗೆ ಸಮಸ್ಯೆಯಾದ ೨೪ ಗಂಟೆ ಒಳಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಮೊದಲ ಆದ್ಯತೆಯಾಗಿ ಒದಗಿಸಬೇಕು. ಎರಡನೇ ಹಂತದಲ್ಲಿ ಖಾಸಗಿ ಬೋರ್ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ನೀಡಬೇಕು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈಗಾಗಲೇ ಜಿಲ್ಲೆಗೆ ಎರಡು ಕೋಟಿ ರು. ಹೆಚ್ಚುವರಿ ಅನುದಾನವನ್ನು ಬೋರ್ವೆಲ್ ತೆಗೆಸಲು ಬಳಸಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಮೇವಿಗೆ ಸಮಸ್ಯೆಯಾಗದಂತೆ ಸರ್ಕಾರದಿಂದ ೪೦ ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ. ಉಚಿತವಾಗಿ ಮೇವಿನ ಬೀಜಗಳ ವಿತರಣೆ ಮಾಡಬೇಕು, ಜಿಲ್ಲೆಯಿಂದ ಜಿಲ್ಲೆಗೆ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಬೇಕು. ಜಿಲ್ಲೆಗೆ ಅವಶ್ಯವಿರುವಷ್ಟು ಮೇವನ್ನು ದಾಸ್ತಾನಿರಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕುಡಿಯುವ ನೀರು ತೊಂದರೆಯಾಗದಂತೆ ಸಂಪೂರ್ಣ ಜವಾಬ್ದಾರಿಯನ್ನು ಹಾಗೂ ಮುಂದಿನ ತಿಂಗಳುಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಮುಂಜಾಗ್ರತೆ ಹಾಗೂ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಮಾತನಾಡಿ, ಜಿಲ್ಲಾಧಿಕಾರಿಗಳು ಪ್ರತಿ ೧೫ ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಗ್ರಾಮೀಣಭೀವೃದ್ದಿ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಎಲ್ಲಾ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು. ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ ಸತ್ಯಭಾಮ ಮಾತನಾಡಿ, ಜಿಲ್ಲೆಯ ೩೬ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ೫೨ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ೫೩ ಖಾಸಗಿ ಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ಆರ್ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಉಪಸ್ಥಿತರಿದ್ದರು.ಹಾಸನದಲ್ಲಿ ಮುಖ್ಯಮಂತ್ರಿ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು.

Share this article