ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಇದೇ ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಬೇಕು. ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯು ಎರಡು ಅಧಿವೇಶನಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಆಕ್ಷೇಪಣೆಗಳಿಗೆ ಅವಕಾಶ ನೀಡದಂತೆ, ಪರೀಕ್ಷಾ ಪಾವಿತ್ರ್ಯತೆಯ ಕಾಪಾಡಲು ಹಾಗೂ ಪರೀಕ್ಷಾ ಸುರಕ್ಷತಾ ದೃಷ್ಟಿಯಿಂದ ಹೆಚ್ಚಿನ ಗಮನಹರಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಕೇಂದ್ರ ಕಚೇರಿಯಿಂದ ಸರಬರಾಜಾಗುವ ಪ್ರಶ್ನೆ ಪತ್ರಿಕೆಗಳು ಹಾಗೂ ಓಎಂಆರ್ ಶೀಟ್ ಬಂಡಲ್‍ಗಳನ್ನು ಜಿಲ್ಲಾ ಖಜಾನೆಯಲ್ಲಿ ಸುರಕ್ಷಿತವಾಗಿಡಬೇಕು. ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮ ವಹಿಸಬೇಕು. ಅವಧಿಗೂ ಮುಂಚೆ ಅಥವಾ ನಿಗಧಿತ ಅವಧಿಗೂ ತಡವಾಗಿ ತೆಗೆಯುವುದು ಮಾಡದೇ, ನಿಗಧಿತ ವೇಳೆಯಲ್ಲಿ ಯಾವುದೇ ರೀತಿಯ ಚರ್ಚೆಗೆ ಗ್ರಾಸವಾಗದಂತೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಪ್ರಾಥಮಿಕ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಪ್ರಥಮ ಚಿಕಿತ್ಸಾ ಪರಿಕರಗಳೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ತಾಲೂಕು ವೈದ್ಯಾಧಿಕಾರಿ ಡಾ.ಗಿರೀಶ್ ಅವರಿಗೆ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸೀರುದ್ದೀನ್ ಮಾತನಾಡಿ, ಶಿಕ್ಷಕರ ಅರ್ಹತಾ ಪರೀಕ್ಷೆಯ ಮೊದಲ ಅಧಿವೇಶನ ಪರೀಕ್ಷೆ ಜೂ.30ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ 15 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 4,235 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಎರಡನೇ ಅಧಿವೇಶನದ ಪರೀಕ್ಷೆಯು ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ 27 ಕೇಂದ್ರಗಳಲ್ಲಿ ನಡೆಯಲಿದ್ದು, 7,317 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು ಎಂದು ತಿಳಿಸಿದರು.ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಬೇಕು. ಪರೀಕ್ಷಾ ಮುಗಿದ ನಂತರ ಓಎಂಆರ್ ಉತ್ತರ ಪತ್ರಿಕೆಗಳನ್ನು ಕೇಂದ್ರ ಕಚೇರಿಗೆ ಸಾಗಿಸುವ ವಾಹನಕ್ಕೆ ಮಾರ್ಗಾಧಿಕಾರಿ ಜೊತೆಗೆ ಒಬ್ಬ ಪೊಲೀಸ್ ಸಿಬ್ಬಂದಿ ನೇಮಿಸುವಂತೆ ಮನವಿ ಮಾಡಿದರು.
ಈ ವೇಳೆ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಭರತ್.ಎಂ.ಕಾಳೇಸಿಂಘೆ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.